ADVERTISEMENT

ಮಾನವ ಕಳ್ಳ ಸಾಗಣೆ; ಎಚ್ಚರ ಅಗತ್ಯ: ಮನು ಪಟೇಲ್ ಬಿ.ವೈ.

ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಲಹೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 6:55 IST
Last Updated 10 ಫೆಬ್ರುವರಿ 2026, 6:55 IST
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಉದ್ಘಾಟಿಸಿದರು
ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಉದ್ಘಾಟಿಸಿದರು   

ಉಡುಪಿ: ಮಾನವ ಕಳ್ಳ ಸಾಗಣೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಜಾರಿಗೊಳಿಸಲಾದ ಕಾನೂನುಗಳನ್ನು ಕ್ಷೇತ್ರ ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ. ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳ ಸಾಗಣೆಯಂತಹ ದುಷ್ಕೃತ್ಯಗಳು ನಡೆಯದಂತೆ ನೋಡಿಕೊಳ್ಳುವುದು ಭಾಗೀದಾರ ಇಲಾಖೆಗಳ ಕರ್ತವ್ಯವಾಗಿದೆ. ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಪ್ರತಿಯೊಬ್ಬ ನಾಗರಿಕರು ಬದ್ಧರಾಗಿರಬೇಕು ಎಂದು ತಿಳಿಸಿದರು.

ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಇಲಾಖೆಯು ಸಮನ್ವಯತೆಯಿಂದ, ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ದುರ್ಬಲ ಸ್ಥಿತಿಯಲ್ಲಿ ಯಾವುದೇ ಕುಟುಂಬದವರು ವಾಸಿಸುತ್ತಿದ್ದಲ್ಲಿ ಅವರ ಮೇಲೆ ನಿಗಾ ವಹಿಸಬೇಕು ಎಂದರು.

ಮಾನವ ಕಳ್ಳ ಸಾಗಣೆ ತಡೆಗಟ್ಟಲು ವ್ಯವಸ್ಥಿತ ಕಾನೂನುಗಳು ಜಾರಿಯಲ್ಲಿದ್ದರೂ ಸಹ ಕಾನೂನುಗಳ ಅರಿವು ಹಾಗೂ ಸಮನ್ವಯದ ಕೊರತೆಯಿಂದಾಗಿ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಸಾಧ್ಯವಾಗಿರುವುದಿಲ್ಲ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಮಾತನಾಡಿ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆಗಾಗಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಮಿತಿಗಳನ್ನು ರಚಿಸಲಾಗಿದ್ದು, ರಕ್ಷಣಾ ಸಮಿತಿಗಳೊಂದಿಗೆ ವಿವಿಧ ಇಲಾಖೆಗಳು ತಮ್ಮ ಜವಾಬ್ದಾರಿಯನ್ನು ಅರಿತು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಹಾದಿಮನೆ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ನೇಟಿವ್ ಆರ್ಗನೈಜೇಶನ್ ವ್ಯವಸ್ಥಾಪಕ ಪ್ರೇಮಾನಂದ ಕಲ್ಮಾಡಿ ಅವರು ಉಪನ್ಯಾಸ ನೀಡಿದರು. ದೀಪಾ ನಿರೂಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.