ADVERTISEMENT

ಕೋವಿಡ್‌ ಲಕ್ಷಣಗಳಿದ್ದರೆ ತಕ್ಷಣೆ ಪರೀಕ್ಷೆ ಮಾಡಿಸಿಕೊಳ್ಳಿ: ಶಾಸಕ ರಘುಪತಿ ಭಟ್

ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಶಾಸಕ ರಘುಪತಿ ಭಟ್

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 16:25 IST
Last Updated 1 ಅಕ್ಟೋಬರ್ 2020, 16:25 IST
ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಸಮಾಜಸೇವಕ ವಿಶುಶೆಟ್ಟಿ ಅಂಬಲಪಾಡಿ ಹಾಗೂ ಪುಂಡಲಿಕ ಗಾಣಿಗ ಅವರನ್ನು ಸನ್ಮಾನಿಸಲಾಯಿತು.
ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಸಮಾಜಸೇವಕ ವಿಶುಶೆಟ್ಟಿ ಅಂಬಲಪಾಡಿ ಹಾಗೂ ಪುಂಡಲಿಕ ಗಾಣಿಗ ಅವರನ್ನು ಸನ್ಮಾನಿಸಲಾಯಿತು.   

ಉಡುಪಿ: ಹಿರಿಯ ನಾಗರಿಕರ ಮಾರ್ಗದರ್ಶನ, ಅನುಭವ ಸಲಹೆ ಸೂಚನೆಗಳು ಸಮಾಜಕ್ಕೆ ಬಹಳ ಮುಖ್ಯ. ಹಿರಿಯ ನಾಗರಿಕರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಗುರುವಾರ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂದರ್ಭ ಹಿರಿಯರು ಬಹಳ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಕಾಪಾಡಿಕೊಳ್ಳುವುದರ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಕೋವಿಡ್ ಸೋಂಕಿನ ಕುರಿತ ಅಪಪ್ರಚಾರಗಳಿಗೆ ಕಿವಿಗೊಡದೆ ಹಿರಿಯ ನಾಗರಿಕರು ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೋಂಕಿನ ಬಗ್ಗೆ ನಿರ್ಲಕ್ಷ್ಯದಿಂದಾಗಿ ಸೋಂಕು ಸಮುದಾಯಕ್ಕೆ ಹರಡುತ್ತಿದೆ. ಹಿರಿಯರ ಜೀವಕ್ಕೂ ಕುತ್ತಾಗುತ್ತಿದೆ ಎಂದರು.

ADVERTISEMENT

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿರಿಯರ ರಕ್ಷಣೆಗಾಗಿ ಹಲವು ಕಾನೂನುಗಳಿದ್ದು, ಕಾನೂನು ಸೇವಾ ಪ್ರಾಧಿಕಾರದ ಮೂಲಕ ಸಿಗುತ್ತಿರುವ ನೆರವು ಪಡೆಯಬೇಕು ಎಂದು ಸಲಹೆ ನೀಡಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವಿಧಾನದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ಹಾಗೂ ಪುಂಡಲಿಕ ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ, ಕೋವಿಡ್ ಸಂದರ್ಭ ಹಿರಿಯ ನಾಗರಿಕರು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಸೇವಾಸಿಂಧು ಜಿಲ್ಲಾ ವ್ಯವಸ್ಥಾಪಕ ಪ್ರಮೋದ್ ಹಿರಿಯ ನಾಗರಿಕರ ಗುರುತಿನ ಚೀಟಿ ಪಡೆಯುವ ಬಗ್ಗೆ ಹಾಗೂ ಆನ್‌ಲೈನ್ ನೋಂದಣಿ ಬಗ್ಗೆ ಮಾಹಿತಿ ನೀಡಿದರು.

ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸಂಧ್ಯಾ ಕಾಮತ್, ನಗರಾಭಿವೃದ್ದಿ ಪ್ರಾಧಿಕಾರದ ಆಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ.ಪಿ. ಕೊಡಂಚ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಶೇಷಪ್ಪ ಇದ್ದರು.

ಜಿಲ್ಲಾ ಅಂಗವಿಕಲರ ಸಬಲೀಕರಣ ಇಲಾಖೆ ಅಧಿಕಾರಿ ಚಂದ್ರನಾಯ್ಕ್ ಸ್ವಾಗತಿಸಿದರು. ಮಣಿಪಾಲ ಪ್ರೌಢಶಾಲೆಯ ಸಹ ಶಿಕ್ಷಕ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.