ADVERTISEMENT

ಉಡುಪಿ: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2024, 7:39 IST
Last Updated 18 ಸೆಪ್ಟೆಂಬರ್ 2024, 7:39 IST
ಉಡುಪಿ ನಗರಸಭೆ ವತಿಯಿಂದ ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ಮಂಗಳವಾರ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಜರುಗಿತು
ಉಡುಪಿ ನಗರಸಭೆ ವತಿಯಿಂದ ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ಮಂಗಳವಾರ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಜರುಗಿತು   

ಉಡುಪಿ: ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಇದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದಡಿ ಉಡುಪಿ ನಗರಸಭೆ ವತಿಯಿಂದ ಮಲ್ಪೆ ವಿಠೋಬಾ ಭಜನಾ ಮಂದಿರದ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಇಡೀ ನಗರ ಸ್ವಚ್ಛವಾಗುತ್ತದೆ. ಈ ಮೂಲಕ ಇಡೀ ಜಿಲ್ಲೆಯನ್ನು ಸ್ವಚ್ಛವಾಗಿಟ್ಟುಕೊಳ್ಳಲು ಸಾಧ್ಯವಾಗಲಿದೆ ಎಂದರು.

ADVERTISEMENT

ವಿದ್ಯಾರ್ಥಿಗಳು ತಾವು ಬಳಸುವ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು. ತಮ್ಮ ಮನೆ, ಶಾಲೆಯ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದು ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಿರದೇ ಇದನ್ನು ದಿನನಿತ್ಯ ಹಾಗೂ ನಿರಂತರವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಉಡುಪಿ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಅವರು ಅಧ್ಯಕ್ಷತೆ ವಹಿಸಿದ್ದರು. ನಗರಸಭೆಯ ಪರಿಸರ ಎಂಜಿನಿಯರ್‌ ಸ್ನೇಹಾ ಕೆ.ಎಸ್. ಅವರು ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಮಹತ್ವ ಸಾರುವ ಪ್ರಮಾಣ ವಚನವನ್ನು ಬೋಧಿಸಿದರು.

ಬಳಿಕ ವಿದ್ಯಾರ್ಥಿಗಳು, ನಗರಸಭೆಯ ಅಧಿಕಾರಿ, ಸಿಬ್ಬಂದಿ, ಸದಸ್ಯರು, ಭಜನಾ ಮಂದಿರದ ಪ್ರಮುಖರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಉದಯ ಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಮೋಹನರಾಜು, ಪೌರಾಯುಕ್ತ ರಾಯಪ್ಪ, ನಗರ ಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಮಲ್ಪೆ ಅಭಿವೃದ್ಧಿ ಸಮಿತಿಯ ಸಂತೋಷ್ ಪೈ, ಹನುಮಾನ್ ವಿಠೋಭ ಭಜನಾ ಮಂದಿರದ ಅಧ್ಯಕ್ಷ ಸತೀಶ್ ಬಂಗೇರ, ಜ್ಞಾನ ಜ್ಯೋತಿ ಭಜನಾ ಮಂದಿರದ ಅಧ್ಯಕ್ಷ ಪಾಂಡುರಂಗ ಮಲ್ಪೆ, ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ಧನಂಜಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.