ಉಡುಪಿ: ರಾಜ್ಯದಲ್ಲಿ 1.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಹಾಗೂ 8 ಸಾವಿರ ಕೋಟಿ ಹೂಡಿಕೆ ಆಕರ್ಷಿಸುವ ಗುರಿ ಹೊಂದಿದ್ದು, ಕರಾವಳಿಗೆ ಹೂಡಿಕೆ ಆಕರ್ಷಣೆಗಾಗಿ ₹200 ಕೋಟಿ ಮೀಸಲಿಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 70ನೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಮಳೆ ಮತ್ತು ಪ್ರವಾಹದಿಂದಾಗುವ ಬೆಳೆಹಾನಿಯ ಪರಿಹಾರದ ಮೊತ್ತವನ್ನು ಹೆಚ್ಚಿಸಲಾಗಿದೆ. ಎನ್.ಡಿ.ಆರ್.ಎಫ್ ನಿಯಮಾವಳಿಯ ಅನ್ವಯ ನೀಡುತ್ತಿದ್ದ ಪರಿಹಾರ ಮೊತ್ತಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಹೆಕ್ಟೇರ್ ಗೆ ₹8,500 ನೀಡುತ್ತಿದೆ ಎಂದು ಹೇಳಿದರು.
ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆಯನ್ನು ನಿರಂತರವಾಗಿ ಅನುಷ್ಠಾನಗೊಳಿಸಲಾಗುತ್ತಿದ್ದು, 48 ಫಲಾನುಭವಿಗಳು ಅದರ ಲಾಭ ಪಡೆದಿದ್ದಾರೆ. ಅವುಗಳ ಜೊತೆಗೆ ನಗರ ಪ್ರದೇಶದ ದುರ್ಬಲ ವರ್ಗದವರ ಸೇವೆಗಾಗಿ 13 ನಮ್ಮ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿವೆ ಎಂದರು.
ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.