ಉಡುಪಿ: ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಫೆಬ್ರುವರಿ ಮೊದಲ ವಾರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಉದ್ಯೋಗ ಮೇಳವು ನಗರದ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಈ ಮೇಳದಲ್ಲಿ ರಾಜ್ಯದ ಹಾಗೂ ಜಿಲ್ಲೆಯ ವಿವಿಧ ಪ್ರತಿಷ್ಠಿತ ಕಂಪನಿಗಳ 100ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸಲಿದ್ದು, 3,500ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಬರುವ ನಿರೀಕ್ಷೆ ಇದೆ. ಅದಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತು ಹೆಸರು ನೋಂದಣಿಗೆ ವೆಬ್‌ಸೈಟ್ ಅನ್ನು ಶೀಘ್ರದಲ್ಲಿ ರಚಿಸಬೇಕು ಎಂದರು.
ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಮೇಳದ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಹಾಗೂ ವೃತ್ತಿಪರ ವಿದ್ಯಾಸಂಸ್ಥೆಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಹಳೆ ವಿದ್ಯಾರ್ಥಿಗಳಿಗೂ ಸಹ ಉದ್ಯೋಗ ಮೇಳದ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಡಿಡಿಪಿಯು ಮಾರುತಿ, ಕೈಗಾರಿಕಾ ಉದ್ದಿಮೆಗಳ ಸಂಘದ ಅಧ್ಯಕ್ಷ ಹರೀಶ್ ಕುಂದರ್, ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನ ಮುಖ್ಯಸ್ಥರು, ವಿವಿಧ ಕಾಲೇಜುಗಳ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.