ADVERTISEMENT

ಕನಕದಾಸರ ಬದುಕು ಎಲ್ಲರಿಗೂ ಆದರ್ಶ: ಶಾಸಕ ಯಶ್‌ಪಾಲ್‌

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 5:00 IST
Last Updated 9 ನವೆಂಬರ್ 2025, 5:00 IST
ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್‌ ಸುವರ್ಣ ಉದ್ಘಾಟಿಸಿದರು
ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್‌ ಸುವರ್ಣ ಉದ್ಘಾಟಿಸಿದರು   

ಉಡುಪಿ: ಇಡೀ ಜಗತ್ತಿಗೆ ಭಕ್ತಿ ಮಾರ್ಗದ ಶಕ್ತಿಯನ್ನು ತೋರಿಸಿಕೊಟ್ಟಿರುವ ಕನಕದಾಸರ ಬದುಕು ನಮಗೆಲ್ಲರಿಗೂ ಆದರ್ಶ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಹಾಲುಮತ ಮಹಾಸಭಾದ ಸಹಯೋಗದಲ್ಲಿ ನಗರದ ಅಜ್ಜರಕಾಡಿನ ಭುಜಂಗ ಪಾರ್ಕಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರಿಗೂ ಉಡುಪಿಗೂ ಅವಿನಾಭಾವ ಸಂಬಂಧವಿದೆ. ಜಗತ್ತಿನೆಲ್ಲೆಡೆಯಿಂದ ಶ್ರೀಕೃಷ್ಣನ ದರ್ಶನಕ್ಕೆ ಬರುವ ಭಕ್ತರು ಮೊದಲು ಕನಕನ ಕಿಂಡಿಯಿಂದಲೇ ದೇವರ ದರ್ಶನ ಪಡೆಯುವುದು ಕನಕದಾಸರ ಶ್ರೇಷ್ಠತೆಗೆ ಹಿಡಿದ ಕೈಗನ್ನಡಿ ಎಂದರು.

ADVERTISEMENT

ಭಕ್ತಿ ಸಂಕೀರ್ತನೆಗಳ ಮೂಲಕ ಸಮಾಜದ ಕಟ್ಟುವ ಕನಕದಾಸರ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ. ಯುವಜನರು ಕನಕದಾಸರ ಕೀರ್ತನೆಗಳ ಬಗ್ಗೆ ತಿಳಿದುಕೊಂಡು ಅವರ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಭಕ್ತಿ ಪರಂಪರೆಯ ದಾಸ ಸಾಹಿತ್ಯದಲ್ಲಿ ಕನಕದಾಸರು ಮುಂಚೂಣಿಯಲ್ಲಿದ್ದು, ಜಾತಿ, ಮತ, ಕುಲ ಭೇದವನ್ನು ತೊಡೆದುಹಾಕಲು ಸಾಹಿತ್ಯ ರಚಿಸಿದರು. ಅಸ್ಪೃಶ್ಯತೆಯ ರೋಗಗ್ರಸ್ತ ಸಮಾಜಕ್ಕೆ ಸಂಕೀರ್ತನೆಗಳ ಮೂಲಕ ಚಿಕಿತ್ಸೆ ನೀಡಿದ ಕನಕದಾಸರನ್ನು ಜಗತ್ತು ಗಂಭೀರವಾಗಿ ಪರಿಗಣಿಸುತ್ತದೆ ಎಂದರು.

ಸಂತ ಕವಿ ಕನಕದಾಸ ಅಧ್ಯಯನ ಕೇಂದ್ರದ ಸದಸ್ಯೆ ಕಾತ್ಯಾಯಿನಿ ಕುಂಜಿಬೆಟ್ಟು ವಿಶೇಷ ಉಪನ್ಯಾಸ ನೀಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಕನಕದಾಸ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷ ಹನುಮಂತ ಡೊಳ್ಳಿನ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.