ADVERTISEMENT

ಆಯುಷ್ಮಾನ್ ಯೋಜನೆ: ರೋಗಿಗಳ ಗೊಂದಲ ಪರಿಹರಿಸಿ

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 14:00 IST
Last Updated 23 ಫೆಬ್ರುವರಿ 2021, 14:00 IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮ್ಯಾನುವೆಲ್ ಸ್ಕಾವೆಂಜರ್ಸ್‌ ನಿಷೇಧ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮ್ಯಾನುವೆಲ್ ಸ್ಕಾವೆಂಜರ್ಸ್‌ ನಿಷೇಧ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.   

ಉಡುಪಿ: ಆಯುಷ್ಮಾನ್ ಕಾರ್ಡ್‌ನಡಿ ಆರೋಗ್ಯ ಸೇವೆ ಪಡೆಯಲು ಇರುವ ಅರ್ಹತೆಗಳ ಕುರಿತು ರೋಗಿಗಳಿಗೆ ಗೊಂದಲಗಳಿವೆ. ಸೌಲಭ್ಯ ಪಡೆಯಲು ಅಗತ್ಯವಾದ ಅರ್ಹತೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಹಾಗೂ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಯೋಜನೆಯ ಕುರಿತು ತರಬೇತಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಯುಷ್ಮಾನ್ ಕಾರ್ಡ್ ಫಲಾನುಭವಿಗಳು ಯಾವ ಸಂದರ್ಭಗಳಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಬಹುದು. ಯಾವ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಿಂದ ರೆಫರಲ್ ಪತ್ರ ತರಬೇಕು, ವೈದ್ಯರು ಯೋಜನೆಯಲ್ಲಿನ ಯಾವ ಕಾಯಿಲೆಗಳಿಗೆ ರೆಫರಲ್ ಪತ್ರ ನೀಡಬೇಕು, ತುರ್ತು ಸಂದರ್ಭಗಳಲ್ಲಿ ಯಾವ ಆಸ್ಪತ್ರೆಗೆ ದಾಖಲಾಗಬೇಕು ಎಂಬ ಬಗ್ಗೆ ರೋಗಿ ಹಾಗೂ ವೈದ್ಯರಿರಲ್ಲಿರುವ ಗೊಂದಲಗಳನ್ನು ಬಗೆಹರಿಸಬೇಕು ಎಂದರು.

ಜಿಲ್ಲೆಯ ಎಲ್ಲ ಆಂಬುಲೆನ್ಸ್ ಚಾಲಕರಿಗೂ ತರಬೇತಿ ಆಯೋಜಿಸಿ, ಆಯುಷ್ಮಾನ್ ಯೋಜನೆಯ ಸಮಗ್ರ ಮಾಹಿತಿ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ. ನವೀನ್ ಭಟ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಉದ್ಯೋಗ ಖಾತ್ರಿ ಯೋಜನೆಯಡಿ ಇದುವರೆಗೆ ಶೇ 137ರಷ್ಟು ಸಾಧನೆಯಾಗಿದ್ದು, ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೆರೆ ಮತ್ತು ತೋಡುಗಳ ಹೂಳೆತ್ತುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಮುಗಿಸಬೇಕು. ಹೂಳೆತ್ತಿದ ನಂತರ ಮಣ್ಣಿನಿಂದ ಜೆಡ್ಡುಗಳನ್ನು ನಿರ್ಮಿಸಬೇಕು. ಜಿಲ್ಲೆಯಲ್ಲಿ ಸಮುದಾಯ ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಿ, ಖಾತ್ರಿ ಯೋಜನೆಯಡಿ ಬಾವಿಗಳನ್ನು ನಿರ್ಮಾಣ ಮಾಡಿ ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಒಣ ತ್ಯಾಜ್ಯ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಕಾರ್ಕಳದಲ್ಲಿ ಎಂಆರ್‌ಎಫ್ ಕಾಮಗಾರಿ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು.

6 ರಿಂದ ತರಗತಿಗಳು ಆರಂಭವಾಗಿದ್ದು, ಯಾವ ವಿದ್ಯಾರ್ಥಿಗಳಲ್ಲಿ ಕೋವಿಡ್ ಕಂಡುಬಂದಿಲ್ಲ. ಕೋವಿಡ್‌ ಮಾರ್ಗಸೂಚಿಯಂತೆ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣದಲ್ಲಿ ಜಿಲ್ಲೆಯು 3ನೇ ಸ್ಥಾನದಲ್ಲಿದೆ ಎಂದು ಡಿಡಿಪಿಐ ಮಾಹಿತಿ ನೀಡಿದರು.

ಖಾಸಗಿ ಶಾಲೆಗಳಲ್ಲಿ ನೇರವಾಗಿ ತರಗತಿಗೆ ಹಾಜರಾಗದೆ ಆನ್‌ಲೈನ್ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮುಂದೆ ಪರೀಕ್ಷೆಗೆ ಹಾಜರಾಗಲು ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ಹೇಳಿದರು.

ಇದೇವೇಳೆ ಮ್ಯಾನುವೆಲ್ ಸ್ಕಾವೆಂಜರ್ಸ್‌ ನಿಷೇಧ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.