ADVERTISEMENT

ವಸತಿ ಯೋಜನೆ ಆದಾಯ ಮಿತಿ ಪರಿಷ್ಕರಣೆಗೆ ಕ್ರಮ ಕೈಗೊಳ್ಳಿ

ಜಲಜೀವನ್ ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ಒತ್ತು ನೀಡಿ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 13:51 IST
Last Updated 21 ಜನವರಿ 2021, 13:51 IST
ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.
ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.   

ಉಡುಪಿ: ಜಲ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಅನುಷ್ಠಾನ ಸಂಬಂಧ ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮದ ಜನರ ಜತೆ ಚರ್ಚಿಸಬೇಕು. ಇದರಿಂದ ಯೋಜನೆಯ ಸಂಪೂರ್ಣ ಪ್ರಯೋಜನ ದೊರೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿನ ಸ್ಥಳೀಯ ಜಲಮೂಲಗಳನ್ನು ಗುರುತಿಸಲು ಗ್ರಾಮಸ್ಥರ ಹಾಗೂ ಜನಪ್ರತಿನಿಧಿಗಳ ನೆರವು ಅಗತ್ಯವಿದೆ. ಯಾವ ಕಾಮಗಾರಿಗಳು ತುರ್ತು ಅತ್ಯಗತ್ಯ ಎಂಬುದನ್ನು ಅರಿತು ಆದ್ಯತೆಯಡಿ ಮಾಡಬೇಕು. ಸ್ಥಳೀಯರ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿ, ಪಾರದರ್ಶಕವಾಗಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಮಾನದಂಡದಲ್ಲಿ ಆದಾಯ ಮಿತಿಯನ್ನು ವಸತಿ ನಿಗಮದಿಂದ ₹ 32,000ಕ್ಕೆ ನಿಗದಿಪಡಿಸಿದ್ದು, ಬಿಪಿಎಲ್ ಕಾರ್ಡ್ ಆದಾಯಮಿತಿ ₹ 1,20,000 ಇದೆ. ಇದರಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಆದಾಯ ಮಿತಿ ಪರಿಷ್ಕರಣೆಗೆ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪತ್ರ ಬರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಕೋವಿಡ್ ಲಸಿಕೆಯನ್ನು ಜಿಲ್ಲೆಯಲ್ಲಿ ಪ್ರಾರಂಭಿಕ ಹಂತದಲ್ಲಿ 22,230 ಮಂದಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನೀಡಲು ಗುರಿ ಹೊಂದಿದ್ದು, ಇದುವರೆಗೆ ಶೇ 60 ಸಾಧನೆ ಆಗಿದ್ದು, 5 ದಿನದಲ್ಲಿ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಡಿಎಚ್ಒ ಡಾ.ಸುದೀರ್ ಚಂದ್ರ ಸೂಡಾ ತಿಳಿಸಿದರು.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮನೆಗಳಿಂದ ಹಸಿ ಕಸ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ವಾರದಲ್ಲಿ ಒಂದು ದಿನ ಒಣ ಕಸ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ. ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.