
ಉಡುಪಿ: ಮಣಿಪಾಲದ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗದಲ್ಲಿ ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದರು.
ಬುಧವಾರ ಓಶನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಸ್ಥಿಮಜ್ಜೆ ಕಸಿ ಯಶಸ್ವಿಯಾಗಿ ನಡೆಸಲು ಅಗತ್ಯವಾದ ಎಲ್ಲ ಸೌಲಭ್ಯಗಳಿದ್ದು ರೋಗಿಗಳಿಗೆ ಗುಣಮಟ್ಟದ ಹಾಗೂ ಗರಿಷ್ಠ ಫಲಿತಾಂಶದ ಚಿಕಿತ್ಸೆ ನೀಡಲಾಗುತ್ತಿದೆ. ಅಸ್ಥಿಮಜ್ಜೆ ಚಿಕಿತ್ಸೆ ಪಡೆಯಲು ದೂರದ ನಗರಗಳಿಗೆ ಹೋಗುವ ಅವಶ್ಯಕತೆ ಇಲ್ಲ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತದೆ ಎಂದರು.
ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್‌ನ ಮಾಹಿತಿ ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ‘ಅಸ್ಥಿಮಜ್ಜೆ ಕಸಿ ವಿವಿಧ ಬಗೆಯ ಕ್ಯಾನ್ಸರ್ ಮತ್ತು ರಕ್ತ ಸಂಬಂಧಿ ಅಸ್ವಸ್ಥತೆಗಳಿಗೆ ಜೀವರಕ್ಷಕ ವಿಧಾನವಾಗಿದೆ. ಇಂತಹ ಸಂಕೀರ್ಣ ವೈದ್ಯಕೀಯ ಚಿಕಿತ್ಸೆ ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರಿನಂತಹ ನಗರಗಳಲ್ಲಿ ಮಾತ್ರ ಸಿಗುತ್ತಿತ್ತು. ಈಗ ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಕಸ್ತೂರಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದೊರೆಯುತ್ತಿದೆ. ಇಲ್ಲಿ ಮಕ್ಕಳಿಗಾಗಿ ವಿಶೇಷ ಸೇವೆಗಳು ಆರಂಭವಾಗಿವೆ ಎಂದರು.
ಸಹಾಯಕ ಪ್ರಾಧ್ಯಾಪಕ ಮತ್ತು ಮಕ್ಕಳ ಅಸ್ಥಿಮಜ್ಜೆ ಕಸಿ ತಜ್ಞ ಡಾ.ಎಂ.ವಿ.ವಿನಯ್ ಮಕ್ಕಳಲ್ಲಿ ಅಸ್ಥಿಮಜ್ಜೆಯ ಕಸಿ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು. ಸಹ ಪ್ರಾದ್ಯಾಪಕ ಮತ್ತು ವಿಭಾಗದ ಮುಖ್ಯಸ್ತರಾದ ಡಾ.ವಾಸುದೇವ ಭಟ್ ಅಸ್ಥಿಮಜ್ಜೆ ಕಸಿ ಮಾಡುವಿಕೆಯು ಗುಣಪಡಿಸಲಾಗದ ಕಾಯಿಲೆಗಳಿಂದ ಬಳಲುತ್ತಿರುವ ಅನೇಕ ರೋಗಿಗಳ ಜೀವನವನ್ನು ಬದಲಾಯಿಸಿದೆ. ವಿಭಾಗವು ಇಲ್ಲಿಯವರೆಗೆ 10 ಕಸಿಗಳನ್ನು ಪೂರ್ಣಗೊಳಿಸಿದೆ. ರೋಗಿಗಳು ಗುಣಮುಖರಾಗಿದ್ದಾರೆ ಎಂದರು.
ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಪಡೆದ ಮಕ್ಕಳ ಪೋಷಕರು ಮಾತನಾಡಿ ‘ಮಗುವಿಗೆ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿದಾಗ ಭಯವಾಗಿತ್ತು. ಚಿಕಿತ್ಸೆ ಫಲಕಾರಿಯಾಗಲಿದೆಯೇ ಎಂಬ ಅನುಮಾನವೂ ಇತ್ತು. ಕೆಎಂಸಿಯಲ್ಲಿ ವೈದ್ಯರು ಗುಣಮಟ್ಟದ ಚಿಕಿತ್ಸೆ ನೀಡಿದ ಫಲವಾಗಿ ಮಗನಿಗೆ ಮರುಜನ್ಮ ಸಿಕ್ಕಂತಾಗಿದೆ. ಆಸ್ಪತ್ರೆಯೇ ದಾನಿಗಳನ್ನು ಪತ್ತೆಹಚ್ಚಿ ಆರ್ಥಿಕ ಹೊರೆಯನ್ನು ಕಡಿಮೆಮಾಡಿ ಮಾನವೀಯತೆ ಮರೆದಿದ್ದಾರೆ ಎಂದು ಬಾವುಕರಾದರು.
ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಎಂ.ವಿ.ಅರ್ಚನಾ ಮಾತನಾಡಿ, ರೋಗಿಗಳಿಗೆ ಆರ್ಥಿಕ ನೆರವು, ಪೂರಕ ಪೌಷ್ಟಿಕಾಂಶ ಮತ್ತು ವಸತಿ ಸೌಲಭ್ಯ ಒದಗಿಸುವ ಮೂಲಕ ಸಮಗ್ರ ಚಿಕಿತ್ಸೆ ನೀಡುತ್ತಿದೆ ಎಂದರು. ಮಾರುಕಟ್ಟೆ ವಿಭಾಗದ ಕೃಷ್ಣ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಸಂಯೋಜಕರಾದ ಡಾ ನವೀನ್ ಸಲಿನ್ಸ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.