ADVERTISEMENT

ಕೊಲ್ಲೂರು: ಸ್ವಚ್ಛತೆಗೆ ಆದ್ಯತೆ ಇರಲಿ- ಜಿಲ್ಲಾಧಿಕಾರಿ ಕೂರ್ಮಾರಾವ್

ವ್ಯವಸ್ಥಾಪನಾ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 14:42 IST
Last Updated 26 ಏಪ್ರಿಲ್ 2022, 14:42 IST
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮಿತಿಯ ಆಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದೇವಸ್ಥಾನದ ಅಭಿವೃಧ್ದಿ ಕಾರ್ಯಗಳ ಕುರಿತು ವ್ಯವಸ್ಥಾಪನಾ ಸಮಿತಿ ಸಭೆ ನಡೆಯಿತು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮಿತಿಯ ಆಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದೇವಸ್ಥಾನದ ಅಭಿವೃಧ್ದಿ ಕಾರ್ಯಗಳ ಕುರಿತು ವ್ಯವಸ್ಥಾಪನಾ ಸಮಿತಿ ಸಭೆ ನಡೆಯಿತು.   

ಕುಂದಾಪುರ: ಕೊಲ್ಲೂರು ದೇವಸ್ಥಾನ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮಿತಿಯ ಆಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದೇವಸ್ಥಾನದ ಅಭಿವೃಧ್ದಿ ಕಾರ್ಯಗಳ ಕುರಿತು ನಡೆದ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಮಾತನಾಡಿ, ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಂಗದಂತೆ ಕ್ರಮ ಕೈಗೊಳ್ಳಬೇಕು.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತ್ಯೇಕ ಸಹಾಯವಾಣಿ ತೆರೆಯಬೇಕು. ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ಕೈಗೊಂಡಿರುವ ನೀರು ಸರಬರಾಜು ಘಟಕದ ನಿರ್ವಹಣೆಯನ್ನು ದೇವಸ್ಥಾನ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಉತ್ತಮವಾಗಿ ನಿರ್ವಹಿಸಬೇಕು ಎಂದರು.

ADVERTISEMENT

ಕೊಲ್ಲೂರು ವ್ಯಾಪ್ತಿಯ ಯುಜಿಡಿ ಕಾಮಗಾರಿಗಳು ಬಹುತೇಕ ಮುಗಿದಿದ್ದು, 334 ಕಟ್ಟಡಗಳಿಗೆ ಸಂಪರ್ಕ ನೀಡಲಾಗಿದೆ. ಬಾಕಿ ಕಟ್ಟಡಗಳಿಗೂ ಶೀಘ್ರ ಯುಜಿಡಿ ಸಂಪರ್ಕ ಕಲ್ಪಿಸಿ, ಕೊಲ್ಲೂರು ದೇವಸ್ಥಾನ ವ್ಯಾಪ್ತಿಯಲ್ಲಿನ ತ್ಯಾಜ್ಯ ಸೌಪರ್ಣಿಕ ನದಿ ಸೇರದಂತೆ ನೋಡಿಕೊಳ್ಳಬೇಕು ಎಂದರು.

ಸ್ಥಳೀಯ ರೈತರು ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದು, ಅಗತ್ಯವಿರುವಷ್ಟು ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಶೀಘ್ರದಲ್ಲಿಯೇ ಸಮಸ್ಯೆ ಬಗಹರಿಸಬೇಕು. ಹೊಸ ಸಬ್ ಸ್ಠೇಶನ್ ನಿರ್ಮಾಣಕ್ಕೆ ಜಾಗ ನೀಡಲಾಗಿದ್ದು, ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ಪಡೆದು ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೊಲ್ಲೂರು ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕು. ಇದಕ್ಕೆ ಪೂರಕವಾಗಿ ದೇವಸ್ಥಾನದಿಂದ ಮಹಿಳಾ ಮಂಡಳಿಗಳಿಗೆ ಅಗತ್ಯ ತರಬೇತಿ ನೀಡಿ, ಬಟ್ಟೆಯ ಬ್ಯಾಗ್‌ಗಳ ತಯಾರಿಕೆಗೆ ಉತ್ತೇಜನ ನೀಡಬೇಕು. ಕೊಲ್ಲೂರು ದೇವಸ್ಥಾನದಿಂದ ಗೋಶಾಲೆ ನಿರ್ಮಾಣ ಮಾಡಲು ಅಗತ್ಯ ಭೂಮಿಯನ್ನು ಗುರುತಿಸಲಾಗಿದ್ದು, ಶೀಘ್ರ ವ್ಯವಸ್ಥಾಪನಾ ಸಮಿತಿಗೆ ನೀಡಲಾಗುವುದು. ಅರಣ್ಯ ಇಲಾಖೆಯಿಂದ ಟ್ರೀಪಾರ್ಕ್, ದೇವಸ್ಥಾನದಿಂದ ಉದ್ಯಾನ, ಮ್ಯೂಸಿಯಂ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ದೇವಾಲಯದ ಸಿಇಒಗೆ ಡಿಸಿ ಸೂಚನೆ ನೀಡಿದರು.

ಕೊಲ್ಲೂರು ದೇವಾಲಯದಿಂದ ನಡೆಸುತ್ತಿರುವ ಶಾಲೆಗಳಲ್ಲಿ ದೆಹಲಿ ಮಾದರಿಯಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ಇದಕ್ಕಾಗಿ ದೆಹಲಿಗೆ ತೆರಳಿ ಅಧ್ಯಯನ ಮಾಡಿ ಬರುವಂತೆಯೂ ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್ ಮಾತನಾಡಿ, ಕೊಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ವೈಜ್ಷಾನಿಕವಾಗಿ ವಿಲೇವಾರಿ ಆಗಬೇಕು. ಬಯೋಗ್ಯಾಸ್ ಘಟಕ ಸ್ಥಾಪಿಸಿ ತ್ಯಾಜ್ಯದಿಂದ ಗ್ಯಾಸ್ ಉತ್ಪಾದಿಸಿ ಸ್ಥಳೀಯ ಹಾಸ್ಟೆಲ್‌ಗಳಿಗೆ ಪೂರೈಕೆ ಮಾಡಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಕೊಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಪಧಾಧಿಕಾರಿಗಳು, ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.