ADVERTISEMENT

ಧರಣಿ ತಾತ್ಕಾಲಿಕ ಹಿಂಪಡೆದ ಕೊರಗರು

ಮೂರು ತಿಂಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಅಹೋರಾತ್ರಿ ಧರಣಿ: ಸುಶೀಲಾ ನಾಡ

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 7:40 IST
Last Updated 10 ಜನವರಿ 2026, 7:40 IST
ಧರಣಿಯಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಕೊರಗ ಸಮುದಾಯದವರು
ಧರಣಿಯಲ್ಲಿ ಶುಕ್ರವಾರ ಪಾಲ್ಗೊಂಡಿದ್ದ ಕೊರಗ ಸಮುದಾಯದವರು   

ಉಡುಪಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದ ವೇಳೆ ಅವರು ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಾರಣ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯುವುದಾಗಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ–ಕೇರಳದ ಅಧ್ಯಕ್ಷೆ ಸುಶೀಲಾ ನಾಡ ತಿಳಿಸಿದರು.

ಅಹೋರಾತ್ರಿ ಧರಣಿಯ 26ನೇ ದಿನವಾದ ಶುಕ್ರವಾರ ಧರಣಿ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳೊಳಗೆ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ಮತ್ತೆ ಅಹೋರಾತ್ರಿ ಧರಣಿ ನಡೆಸುವುದಾಗಿ ತಿಳಿಸಿದರು.

ನಿರ್ದಿಷ್ಟ ದುರ್ಬಲ ಬುಡಕಟ್ಟು ಗುಂಪಿಗೆ (ಪಿ.ವಿ.ಜಿ.ಟಿ) ಸೇರಿರುವ ನಮಗೆ ಪ್ರತ್ಯೇಕವಾಗಿ ಉದ್ಯೋಗದಲ್ಲಿ ನೇರ ನೇಮಕಾತಿ ನೀಡಬೇಕೆಂದು ಒತ್ತಾಯಿಸಿದ್ದೇವೆ. ಈ ವಿಚಾರವನ್ನು ಮುಖ್ಯಮಂತ್ರಿ ಮತ್ತು ಇತರ ಉನ್ನತ ಅಧಿಕಾರಿಗಳಿಗೆ ಮನವರಿಕೆ ಮಾಡಿದ್ದೇವೆ ಎಂದು ಅವರು ಹೇಳಿದರು.

ADVERTISEMENT

ವಿವಿಧ ಪ್ರಗತಿಪರ ಸಂಘಟನೆಗಳು, ರಾಜಕೀಯ ಪಕ್ಷಗಳು ಜನಪ್ರತಿನಿಧಿಗಳು ನಮ್ಮ ಧರಣಿಗೆ ಬೆಂಬಲ ಸೂಚಿಸಿದ್ದರು. ಮಾಜಿ ಸಂಸದ ಕೆ.ಜಯಪ್ರಕಾಶ್‌ ಹೆಗ್ಡೆ ಅವರ ನೇತೃತ್ವದಲ್ಲಿ ಸಮುದಾಯದ ನಿಯೋಗವು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದೆ. ಈ ವೇಳೆ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಉಪಸ್ಥಿತರಿದ್ದರು. ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರೂ ನಮಗೆ ಸಹಕಾರ ನೀಡಿದ್ದಾರೆ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಬುಡಕಟ್ಟು ಕಲ್ಯಾಣ ಇಲಾಖೆ ಮುಖ್ಯ ಕಾರ್ಯದರ್ಶಿ ಎಂ.ಕನಗವಲ್ಲಿ, ನಿರ್ದೇಶಕ ಯೋಗೀಶ್‌ ಕೆ. ಅವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು ಎಂದು ವಿವರಿಸಿದರು.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೊರಗ ಸಮುದಾಯದ 2 ಸಾವಿರ ಮಂದಿ ವಿದ್ಯಾವಂತ ಯುವಜನರಿದ್ದು, ಸರ್ಕಾರದ ವಿವಿಧ ಇಲಾಖೆಗಳಿಗೆ ನೇರ ನೇಮಕಾತಿ ಮೂಲಕ ಅವರಿಗೆ ಉದ್ಯೋಗ ನೀಡಬೇಕೆಂದು ಮನವಿ ಸಲ್ಲಿಸಿದ್ದೇವೆ. ಅದಕ್ಕೆ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ನಮ್ಮ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಅವರು ಆಗ್ರಹಿಸಿದರು.

ಒಕ್ಕೂಟದ ಸಂಯೋಜಕ ಕೆ. ಪುತ್ರನ್‌, ಭಾರತಿ ಕಾಪು, ಶೀನಾ ಬೆಳ್ಮಣ್‌, ಶೇಖರ್‌ ಕೆಂಜೂರು, ದಿನಕರ್‌ ಕಳ್ತೂರು, ಪ್ರೀತಿ ಹೆಬ್ರಿ, ಸುರೇಶ್‌ ಕಾಪು, ಸಂಜೀವ ಬಾರ್ಕೂರು, ಕುಮಾರ್‌ ದಾಸ್‌ ಹಾಲಾಡಿ, ಪ್ರವೀಣ್‌ ಹೆಬ್ರಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.