ADVERTISEMENT

ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಚಟುವಟಿಕೆಗಳಿಗೆ ಮಣ್ಣು ಸಾಗಣೆ ವಿರುದ್ಧ ದೂರು: ಸಂಸದರ ಅಧ್ಯಕ್ಷತೆಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 7:46 IST
Last Updated 24 ಫೆಬ್ರುವರಿ 2026, 7:46 IST
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು   

ಉಡುಪಿ: ರೈತರು ಕೃಷಿ ಚಟುವಟಿಕೆಗಳಿಗೆ ತಮ್ಮ ಜಮೀನಿನ ಮಣ್ಣನ್ನು ಬಳಸಲು ಸಾಗಾಣೆ ಮಾಡುತ್ತಿರುವಾಗ ತೊಂದರೆ ಆಗುತ್ತಿದೆ ಎಂಬ ದೂರುಗಳು ಬರುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸಿ ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ರೈತರುಗಳು ತಮ್ಮ ಕೃಷಿ ಚಟುವಟಿಕೆಗಳಿಗೆ ಖಾಸಗಿ ಜಮೀನುಗಳಿಂದ ಮಣ್ಣನ್ನು ಸಾಗಾಟ ಮಾಡಿ ಇನ್ನೊಂದು ಜಮೀನಿಗೆ ಬಳಸುತ್ತಿದ್ದಾರೆ. ಅವರು ಅನ್ಯ ಉದ್ದೇಶಕ್ಕೆ ಬಳಸುತ್ತಿಲ್ಲ. ನಿಯಮಾನುಸಾರ ಅವರಿಗೆ ಸಮಸ್ಯೆ ಉಂಟಾಗದಂತೆ ಕಾರ್ಯನಿರ್ವಹಿಸಬೇಕು ಎಂದರು.

ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಈಚೆಗೆ ಕೋಟ ವ್ಯಾಪ್ತಿಯಲ್ಲಿ ಮಣ್ಣು ಸಾಗಾಟ ಲಾರಿಯಿಂದ ಎರಡು ಅಪಘಾತ ಪ್ರಕರಣಗಳು ಸಂಭವಿಸಿದ್ದು, ನಂತರದ ದಿನಗಳಲ್ಲಿ ರೈತರು ಮಣ್ಣು ಸಾಗಾಟ ನಡೆಸುತ್ತಿರುವುದಕ್ಕೆ ಸಂಬಂಧಿಸಿ ದೂರುಗಳು ಬರುತ್ತಿವೆ. ಕಳೆದ ಒಂದು ವರ್ಷದಿಂದ ಈ ರೀತಿಯ ದೂರುಗಳು ಬಂದಿರಲಿಲ್ಲ. ರೈತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದು ಸೂಕ್ತ ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ , ಗುರುರಾಜ್ ಶೆಟ್ಟಿ ಗಂಟಿಹೊಳೆ, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವಿಂಧ್ಯಾ ಎನ್.ಎಂ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.