ADVERTISEMENT

ಪಿಪಿಪಿ ಮಾದರಿಯಲ್ಲಿ ಕೆಪಿಎಸ್ ಶಾಲೆ ಅಭಿವೃದ್ಧಿ

ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಮೊದಲ ಒಡಂಬಡಿಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 13:40 IST
Last Updated 5 ಡಿಸೆಂಬರ್ 2022, 13:40 IST
ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆಪಿಎಸ್ ಶಾಲೆ ಅಭಿವೃದ್ಧಿ ಮಾಡುವ ಸಂಬಂಧ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಹಾಗೂ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಡುವೆ ಸೋಮವಾರ ಒಡಂಬಡಿಕೆ ನಡೆಯಿತು.
ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆಪಿಎಸ್ ಶಾಲೆ ಅಭಿವೃದ್ಧಿ ಮಾಡುವ ಸಂಬಂಧ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಹಾಗೂ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಡುವೆ ಸೋಮವಾರ ಒಡಂಬಡಿಕೆ ನಡೆಯಿತು.   

ಉಡುಪಿ: ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆಪಿಎಸ್ ಶಾಲೆ ಅಭಿವೃದ್ಧಿ ಮಾಡುವ ಸಂಬಂಧ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿ ಹಾಗೂ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ನಡುವೆ ಒಡಂಬಡಿಕೆ ನಡೆದಿದ್ದು ರಾಜ್ಯದಲ್ಲೇ ಮೊದಲು ಎನ್ನಲಾಗಿದೆ.

ಮಣಿಪಾಲದ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು.

ಒಡಂಬಡಿಕೆಯಂತೆ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಬ್ರಹ್ಮಾವರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ಕಟ್ಟಡ ನಿರ್ಮಾಣ, ಪೂರ್ವ ಪ್ರಾಥಮಿಕ ವಿಭಾಗ ಆರಂಭಿಸಲು ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಸೊಸೈಟಿಯು ₹ 2.57 ಕೋಟಿ ನೆರವು ನೀಡಲಿದೆ.

ADVERTISEMENT

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಒಪ್ಪಂದದ ಅನ್ವಯ ಬ್ರಹ್ಮಾವರದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯಗಳನ್ನು ಒಳಗೊಂಡಿರುವ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ಈ ಒಡಂಬಡಿಕೆಗೆ ಸರ್ಕಾರದಿಂದ ಅಗತ್ಯವಿರುವ ಅನುಮತಿಯನ್ನು ಅತ್ಯಂತ ಶೀಘ್ರದಲ್ಲಿ ದೊರಕಿಸಿಕೊಡಲಾಗುವುದು. ಶೀಘ್ರದಲ್ಲಿ ಕಾಮಗಾರಿ ಕೂಡ ಆರಂಭಿಸಲಾಗುವುದು ಎಂದರು.

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಅಧ್ಯಕ್ಷ ಎಚ್.ಎಸ್.ಶೆಟ್ಟಿ, ಡಿಡಿಪಿಐ ಶಿವರಾಜ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಪಾಂಡುರಂಗ ಕುಲಾಲ್, ರಾಮಕೃಷ್ಣ ಹಾರಾಡಿ, ಡಯಟ್ ಪ್ರಾಂಶುಪಾಲ ಡಾ.ಅಶೋಕ್ ಕಾಮತ್ ಉಪಸ್ಥಿತರಿದ್ದರು.

ಬ್ರಹ್ಮಾವರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 604, ಪ್ರೌಢಶಾಲೆಯಲ್ಲಿ 888 ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ 208 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.