ADVERTISEMENT

ಉಡುಪಿ: ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಕೂರ್ಮಾ ರಾವ್

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 14:18 IST
Last Updated 1 ಸೆಪ್ಟೆಂಬರ್ 2021, 14:18 IST
ಕಚೇರಿಯಲ್ಲಿ ಬುಧವಾರ ನೂತನ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರ ಸ್ವೀಕರಿಸಿದರು
ಕಚೇರಿಯಲ್ಲಿ ಬುಧವಾರ ನೂತನ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರ ಸ್ವೀಕರಿಸಿದರು   

ಉಡುಪಿ: ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳ ಆದ್ಯತೆ ನೋಡಿಕೊಂಡು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ನೂತನ ಜಿಲ್ಲಾಧಿಕಾರಿ ಕೂರ್ಮಾ ರಾವ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಜಿಲ್ಲೆಯ ಜನರೊಂದಿಗೆ ಬೆರೆತು ಅವರ ಕಷ್ಟ ಸುಖಗಳಿಗೆ ಸ್ಪಂದಿಸುತ್ತೇನೆ. ಜನಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ ಎಂದರು.

ಸದ್ಯ ಜಿಲ್ಲೆಯಲ್ಲಿ ಕೋವೀಡ್ ನಿರ್ವಹಣೆಗೆ ಆದ್ಯತೆ ನೀಡುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಹಿಂದಿನ ಡಿಸಿ ಮತ್ತು ಅಧಿಕಾರಿಗಳು ಜಿಲ್ಲೆಯಲ್ಲಿ ಕೊವೀಡ್ ನಿಯಂತ್ರಣಕ್ಕೆ ಪರಿಣಾಮಕಾರಿ ಕೆಲಸ ಮಾಡಿದ್ದಾರೆ. ಅದನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.

ADVERTISEMENT

ಶೇ 100ರಷ್ಟು ಲಸಿಕೆ ಹಾಕುವುದು ಗುರಿಯಾಗಿದ್ದು, ಕೋವಿಡ್‌ ನಿಯಂತ್ರಣಕ್ಕೆ ಸಾರ್ವಜನಿಕರು ಕೈಜೋಡಿಸಬೇಕು. ಲಸಿಕೆ ಹಾಕಿಸಿಕೊಂಡ ಮೇಲೂ ಮೈಮರೆಯದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ವೈಯುಕ್ತಿಕ ಅಂತರ ಕಾಪಾಡುವುದು ಹಗೂ ಸ್ವಚ್ಛತೆ ಪಾಲಿಸಬೇಕು ಎಂದರು.

ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಪಾಲನೆಗೆ ಸರ್ಕಾರದಿಂದ ಆದೇಶ ಬಂದಿದ್ದು, ಪಾಲಿಸಲೇಬೇಕು. ಸದ್ಯಕ್ಕೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಕಡಿಮೆ ಇರುವುದರಿಂದ ಮುಂದೆ ಸರ್ಕಾರದಿಂದ ಬರುವ ಆದೇಶವನ್ನು ಅನುಷ್ಠಾನಗೊಳಿಸುವುದಾಗಿ ತಿಳಿಸಿದರು.

ಕರಾವಳಿಯಲ್ಲಿ ಕೆಲಸ ಮಾಡಿದ ಅನುಭವ ಇದೆ. ಹಿಂದೆ, ಭಟ್ಕಳದಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. 2 ವರ್ಷ ಯಾದಗಿರಿಯಲ್ಲಿ ಜಿಲ್ಲಾಧಿಕಾರಿಯಾಗಿ ಹಾಗೂ 1 ವರ್ಷ ಸಾರಿಗೆ ನಿಗಮದಲ್ಲಿ ಕೆಲಸ ಮಾಡಿದ್ದೇನೆ. ಉಡುಪಿಗೆ ಜಿಲ್ಲಾಧಿಕಾರಿಯಾಗಿ ಬಂದಿರುವುದಕ್ಕೆ ಸಂತಸವಿದೆ ಎಂದರು.

ಜಿಲ್ಲೆಯಲ್ಲಿ ಸದ್ಯ 9 ರಿಂದ 12ನೇ ತರಗತಿಗಳು ಆರಂಭವಾಗಿವೆ. ಕೋವಿಡ್ ಪಾಸಿಟಿವಿಟಿ ದರ ಹಾಗೂ ಸರ್ಕಾರದ ಸೂಚನೆಯಂತೆ ಮುಂದೆ 6 ರಿಂದ 8ನೇ ತರಗತಿ ಆರಂಭಕ್ಕೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.