
ಉಡುಪಿ: ಮೀನುಗಾರಿಕೆ, ಬೀಡಿ ಉದ್ಯಮ, ಕಟ್ಟಡ ನಿರ್ಮಾಣ ಕಾಮಗಾರಿ, ಕೃಷಿ ಕೆಲಸ ಸೇರಿದಂತೆ ಜಿಲ್ಲೆಯಲ್ಲಿ ಸಾವಿರಾರು ಕಾರ್ಮಿಕರು ಅಸಂಘಟಿತ, ಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪ್ರತಿ ಬಜೆಟ್‌ಗಳು ಬರುವಾಗಲೂ ಅವರಲ್ಲಿ ಹಲವಾರು ನಿರೀಕ್ಷೆಗಳು ಗರಿಗೆದರಿದರೂ ಅವುಗಳ ಸಾಕಾರ ಮಾತ್ರ ಮರೀಚಿಕೆಯಾಗಿದೆ.
ಅಸಂಘಟಿತ ವಲಯದ ಮತ್ತು ಕಡಿಮೆ ಸಂಬಳ ಪಡೆಯುವ ಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕೆಂಬ ಒತ್ತಾಯ ಬಹುಕಾಲದಿಂದ ಕೇಳಿ ಬರುತ್ತಿದ್ದರೂ ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.
ಜಿಲ್ಲೆಯಲ್ಲಿ ಮೀನುಗಾರಿಕಾ ಕ್ಷೇತ್ರದಲ್ಲಿ ಸಾವಿರಾರು ಮಂದಿ ಕಾರ್ಮಿಕರು ದುಡಿಯುತ್ತಿದ್ದಾರೆ. ಆರೋಗ್ಯ, ವಸತಿ ಯೋಜನೆ ಸೇರಿದಂತೆ ಹಲವು ಯೋಜನೆಗಳು ಇವರ ಮನೆ ಬಾಗಿಲಿಗೆ ತಲುಪಿಯೇ ಇಲ್ಲ ಎನ್ನುತ್ತಾರೆ ಕಾರ್ಮಿಕರು.
ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಹೊರ ರಾಜ್ಯಗಳ ಸಾವಿರಾರು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಇವರಿಗೆ ಯಾವುದೇ ಸೌಲಭ್ಯಗಳು ದೊರಕುತ್ತಿಲ್ಲ ಎಂದು ಹೇಳುತ್ತಾರೆ.
ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನೋಂದಾಯಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳಿಗೆ ಶೈಕ್ಷಣಿಕ, ವೈದ್ಯಕೀಯ ಮತ್ತು ಇತರೆ ಸೌಲಭ್ಯಗಳನ್ನು ಹೆಚ್ಚಿಸಬೇಕೆಂಬ ಬೇಡಿಕೆಯು ಕಾರ್ಮಿಕ ವರ್ಗದಿಂದ ಕೇಳಿ ಬಂದಿದೆ.
ಅಸಂಘಟಿತ ವಲಯದ ಕಾರ್ಮಿಕರಿಗೂ ವಸತಿ ಯೋಜನೆಯನ್ನು ಘೋಷಿಸಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕೆಂಬ ಬೇಡಿಕೆಯನ್ನೂ ಕಾರ್ಮಿಕರು ಮುಂದಿರಿಸಿದ್ದಾರೆ.
ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಆರಂಭವಾದರೆ ಸ್ಥಳೀಯ ಕಾರ್ಮಿಕರಿಗೆ ಹೆಚ್ಚಿನ ಉದ್ಯೋಗ ಲಭಿಸುವ ಸಾಧ್ಯತೆ ಇರುವುದರಿಂದ ಈ ನಿಟ್ಟಿನಲ್ಲಿ ಸರ್ಕಾರವು ಸೂಕ್ತ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರುವ ಅಗತ್ಯ ಇದೆ ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.
ಕರಾವಳಿ ಜಿಲ್ಲೆಯಾದ ಉಡುಪಿಯಲ್ಲಿ ಬೀಡಿ ಕಾರ್ಮಿಕರ ಸಂಖ್ಯೆ ಹೆಚ್ಚಿದೆ. ಈ ಉದ್ಯೋಗವು ಗ್ರಾಮೀಣ ಪ್ರದೇಶದ ಮಹಿಳೆಯರ ಪ್ರಮುಖ ಜೀವನೋಪಾಯವೂ ಹೌದು. ಬೀಡಿ ಕಾರ್ಮಿಕರಿಗೆ ಸಾವಿರ ಬೀಡಿಗೆ ತುಟ್ಟಿಭತ್ಯೆ ಸೇರಿ ₹301.98 ನೀಡಬೇಕೆಂದು ರಾಜ್ಯ ಸರ್ಕಾರ ನಿಗದಿಪಡಿಸಿದ್ದರೂ ಕಂಪನಿ ಮಾಲೀಕರು ನೀಡಿಲ್ಲ ಎಂದು ಆರೋಪಿಸಿ ಕೆಲ ತಿಂಗಳ ಹಿಂದೆ ಬೀಡಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.
ಬೀಡಿ ಕಾರ್ಮಿಕ ಮಹಿಳೆಯರು ಅತ್ಯಂತ ಸಂಕಷ್ಟ ಸ್ಥಿತಿಯಲ್ಲಿದ್ದು, ಅವರ ಜೀವನ ಮಟ್ಟ ಸುಧಾರಣೆಗಾಗಿ ಸರ್ಕಾರವು ಬಜೆಟ್‌ನಲ್ಲಿ ಸೂಕ್ತ ಯೋಜನೆ ಘೋಷಿಸಿ ಕಾರ್ಯರೂಪಕ್ಕೆ ತರಬೇಕು ಎಂಬುದು ಕಾರ್ಮಿಕರು ಆಗ್ರಹವಾಗಿದೆ.
ಬೀಡಿ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೂ ಬೇಕಿದೆ ಆದ್ಯತೆ
‘ಕನಿಷ್ಠ ವೇತನ ಇನ್ನೂ ಮರೀಚಿಕೆ’
‘ಸುಮಾರು 80 ಬಗೆಯ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು. ಈ ಕುರಿತು ಮೂರು ತಿಂಗಳ ಹಿಂದೆ ಕರಡು ಅಧಿಸೂಚನೆ ಹೊರಡಿಸಿದರೂ ಇನ್ನೂ ಅಂತಿಮಗೊಂಡಿಲ್ಲ. ಕಡಿಮೆ ವೇತನ ಪಡೆಯುವ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರ ವೇತನವನ್ನು ಜಾಸ್ತಿ ಮಾಡಬೇಕು ಈ ಕುರಿತು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು’ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ. ‘ಸೊಸೈಟಿಯಲ್ಲಿ ನೋಂದಣಿಯಾಗದ ಮೀನುಗಾರರಿಗೆ ಮರಣ ಪರಿಹಾರ ಅವರ ಮಕ್ಕಳಿಗೆ ಶಿಕ್ಷಣ ಸೇರಿದಂತೆ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. ಮಲ್ಪೆ ಬಂದರಿನಲ್ಲಿ ಶೇ 50ರಷ್ಟು ಕಾರ್ಮಿಕರು ಹೊರರಾಜ್ಯದ ಕಾರ್ಮಿಕಾರರಾಗಿದ್ದು ಇಂತಹ ಕಾರ್ಮಿಕರ ಮಕ್ಕಳ ಶಿಕ್ಷಣ ಮರಣ ಪರಿಹಾರ ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಯೋಜನೆ ಘೋಷಿಸಬೇಕು’ ಎಂದು ಅವರು ಹೇಳಿದ್ದಾರೆ. ‘ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.