ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಮುಡಾ ಹಗರಣ ದೇಶದೆಲ್ಲೆಡೆ ಚರ್ಚೆಯಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿರುವ ಕಾರಣ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಶೇ 40 ಕಮಿಷನ್ ಸರ್ಕಾರ, ಪೇಸಿಎಂ ಮೊದಲಾದ ಅಭಿಯಾನಗಳನ್ನು ಕಾಂಗ್ರೆಸ್‌ನವರು ಮಾಡಿದ್ದಾರೆ. ಈಗ ಮುಡಾ ಹಗರಣದ ಬಗ್ಗೆ ಸಿದ್ದರಾಮಯ್ಯ ಅವರು ಮೌನವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಮೂಗಿನ ಕೆಳಗೆ ಈ ಹಗರಣ ನಡೆದಿದ್ದು ಅವರು ಅಧಿಕಾರ ತ್ಯಾಗ ಮಾಡಲೇಬೇಕು. ಈ ಪ್ರಕರಣದ ತನಿಖೆಯನ್ನು ಕೂಡಲೇ ಸಿಬಿಐಗೆ ಒಪ್ಪಿಸಬೇಕು ಎಂದೂ ಆಗ್ರಹಿಸಿದರು.
ಲೋಕಸಭಾ ಚುನಾವಣೆಯ ವೇಳೆ, ಬಿಜೆಪಿಯವರು ಸಂವಿಧಾನವನ್ನು ಬದಲಿಸುತ್ತಾರೆ ಎಂದು ಕಾಂಗ್ರೆಸ್‌ನವರು ಸುಳ್ಳು ಪ್ರಚಾರ ಮಾಡಿದ್ದರು. ಇವತ್ತು ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿರಿಸಿದ ₹14 ಸಾವಿರ ಕೋಟಿಯನ್ನು ಗ್ಯಾರಂಟಿಗಳಿಗೆ ಬಳಕೆ ಮಾಡುತ್ತಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಕ್ಷವು ದಲಿತ ವಿರೋಧಿಯಾಗಿದೆ ಎಂದು ಆರೋಪಿಸಿದ ಅವರು, ಗ್ಯಾರಂಟಿಗೆ ಬಳಕೆ ಮಾಡಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹಣವನ್ನು ಕೂಡಲೇ ಸಂಬಂಧಿತ ಇಲಾಖೆಗೆ ಮರಳಿಸಬೇಕು ಎಂದು ಒತ್ತಾಯಿಸಿದರು.
ವಾಲ್ಮೀಕಿ ನಿಗಮದ ಅವಾಂತರಗಳನ್ನು ನೋಡಿದರೆ ಸಂಕಟವಾಗುತ್ತದೆ. ಹಣ ದುರುಪಯೋಗವಾಗುವುದನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
ಮುಡಾ ಮತ್ತು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣಗಳನ್ನು ಖಂಡಿಸಿ ಬಿಜೆಪಿ ವತಿಯಿಂದ ವಿಧಾನಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಅವರು ತಿಳಿಸಿದರು.
ಪ್ರತಿಭಟನೆ ನಡೆಸುವ ವಿರೋಧ ಪಕ್ಷದ ಮುಖಂಡರನ್ನು ಬಂಧಿಸುವ ಮೂಲಕ ಸರ್ಕಾರವು ವಾಕ್‌ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ. ಇದು ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ ಎಂದರು.
ಕಾಮಗಾರಿ ವಿಳಂಬವಾದರೆ ದೂರು: ಸಂತೆಕಟ್ಟೆಯ ಬಳಿ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ವಿಳಂಬ ಮಾಡಿದರೆ ಅಧಿಕಾರಿಗಳ ವಿರುದ್ಧ ಹೆದ್ದಾರಿ ಸಚಿವಾಲಯಕ್ಕೆ ದೂರು ನೀಡಲಾಗುವುದು ಎಂದು ಸಂಸದರು ತಿಳಿಸಿದರು.
ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ್ ಶೆಟ್ಟಿ, ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ವಕ್ತಾರರಾದ ಗೀತಾಂಜಲಿ ಸುವರ್ಣ, ವಿಜಯ ಕುಮಾರ್ ಉದ್ಯಾವರ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಎ. ಶಿವಕುಮಾರ್ ಇದ್ದರು.
‘ಮಳೆ ಹಾನಿ ಸಂಭವಿಸಿದರೂ ಬಾರದ ಸಚಿವೆ’
ಜಿಲ್ಲೆಯಲ್ಲಿ ವಿಪರೀತ ಮಳೆಯಾಗಿ ಮನೆಗಳು ಬಿದ್ದಿವೆ ಕೃಷಿ ಹಾನಿ ಸಂಭವಿಸಿದೆ. ಆದರೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂಬತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆರೋಪಿಸಿದರು. ಹಿಂದೆ ಬರ ಪರಿಸ್ಥಿತಿ ಉಂಟಾದಾಗಲೂ ಸಚಿವೆ ಜಿಲ್ಲೆಗೆ ಬಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡುಕೊಂಡಿರಲಿಲ್ಲ ಎಂದರು. ನೀವು ಉಸ್ತುವಾರಿ ಸಚಿವೆ ಆಗಿ ಎಂದು ಜನರು ಕೇಳಿಕೊಂಡಿರಲಿಲ್ಲ. ಆ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಹುದ್ದೆಗೆ ರಾಜೀನಾಮೆ ನೀಡಿ. ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿಗಳನ್ನು ನಿಯೋಜಸಲಿ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.