ADVERTISEMENT

ವಿಶ್ವ ರಕ್ತದಾನಿಗಳ ದಿನಾಚರಣೆ: ‘ರಕ್ತದಾನದ ಮಹತ್ವ ತಿಳಿಸುವ ಕೆಲಸವಾಗಲಿ’

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 14:07 IST
Last Updated 17 ಜೂನ್ 2025, 14:07 IST
ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ಲಕ್ಷ್ಮೀಶ ಉಡುಪ, ರೂಪ ಬಲ್ಲಾಳ್, ಕಾರ್ತಿಕ್ ನಾಯ್ಕ್ ಹಾಗೂ ಗಿರಿಜಾ ಸುವರ್ಣ ಅವರನ್ನು ಸನ್ಮಾನಿಸಲಾಯಿತು
ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ಲಕ್ಷ್ಮೀಶ ಉಡುಪ, ರೂಪ ಬಲ್ಲಾಳ್, ಕಾರ್ತಿಕ್ ನಾಯ್ಕ್ ಹಾಗೂ ಗಿರಿಜಾ ಸುವರ್ಣ ಅವರನ್ನು ಸನ್ಮಾನಿಸಲಾಯಿತು   

ಉಡುಪಿ: ‘ಅಪಘಾತದಿಂದ ಹಾಗೂ ಕಾಯಿಲೆಯಿಂದ ಪ್ರಾಣಾಪಾಯದಲ್ಲಿ ಇರುವವರ ಜೀವ ಉಳಿಸಲು ರಕ್ತದಾನ ಮಹತ್ತರ ಪಾತ್ರ ವಹಿಸುತ್ತದೆ. ರಕ್ತದಾನ ಮಾಡಲು ಜನರು ಮುಂದೆ ಬರಬೇಕು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಜಿ. ಹುಬ್ಬಳ್ಳಿ ಕರೆ ನೀಡಿದರು.

ನಗರದ ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ರಕ್ತನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಹಾಗೂ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಮಂಗಳವಾರ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಾದ್ಯಂತ ಆಸ್ಪತ್ರೆಗಳಲ್ಲಿ ಪ್ರತಿದಿನ ಸೂಕ್ತ ಗುಂಪಿನ ರಕ್ತದ ಕೊರತೆಯಿಂದ, ಅಪಘಾತದಲ್ಲಿ ತೀವ್ರ ತರಹದ ಗಾಯದಿಂದ ರಕ್ತಸ್ರಾವವಾಗಿ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ರಕ್ತದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಕೊರತೆ ಇದ್ದು, ರಕ್ತದಾನ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ರಕ್ತದಾನದಂತಹ ಮಹತ್ವಪೂರ್ಣ ಕಾರ್ಯದಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದರು.

ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ಅದನ್ನು ಕೃತಕವಾಗಿ ತಯಾರಿಸಲೂ ಸಾಧ್ಯವಿಲ್ಲ. ವ್ಯಕ್ತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ಬಾರಿಯಾದರೂ ರಕ್ತದಾನ ಮಾಡಿದಲ್ಲಿ ದೇಹದಲ್ಲಿ ಹೊಸ ರಕ್ತ ಉತ್ಪಾದನೆ ಆಗುವುದರೊಂದಿಗೆ ಹೃದಯಾಘಾತ, ಕ್ಯಾನ್ಸರ್, ಹೃದಯ ಸಂಬಂಧಿ ರೋಗಗಳು ಸೇರಿದಂತೆ ವಿವಿಧ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್. ಅಶೋಕ್ ಮಾತನಾಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು ಎಸ್.ವಿ. ಪ್ರತಿಜ್ಞಾ ವಿಧಿ ಬೋಧಿಸಿದರು. ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ಲಕ್ಷ್ಮೀಶ ಉಡುಪ, ರೂಪ ಬಲ್ಲಾಳ್, ಕಾರ್ತಿಕ್ ನಾಯ್ಕ್ ಹಾಗೂ ಗಿರಿಜಾ ಸುವರ್ಣ ಅವರನ್ನು ಸನ್ಮಾನಿಸಲಾಯಿತು.

ADVERTISEMENT

ಕಾರ್ಯಕ್ರಮದಲ್ಲಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ., ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್, ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾಕುಮಾರಿ, ಜೆಸಿಐ ಅಲೂಮಿನಿ ಕ್ಲಬ್ ಅಧ್ಯಕ್ಷೆ ಆಶಾ ಅಲೆನ್ ವಾಜ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಡಾ.ವಿದ್ಯಾಲಕ್ಷ್ಮಿ ಸ್ವಾಗತಿಸಿದರು. ಜಿಲ್ಲಾ ಕಾರ್ಯಕ್ರಮ ಮೇಲ್ವಿಚಾರಕ ಮಹಾಬಲೇಶ್ವರ ನಿರೂಪಿಸಿದರು. ಯೂತ್‌ ರೆಡ್‌ಕ್ರಾಸ್ ಸಹಾಯಕ ಡೀನ್ ಯೋಗೀಶ್ ಆಚಾರ್ಯ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.