ADVERTISEMENT

ಉಡುಪಿ | ‘ಮೀನುಗಾರಿಕಾ ಬಂದರು ಅಭಿವೃದ್ಧಿಗೆ ಕ್ರಮ’

79ನೇ ಸ್ವಾತಂತ್ರ್ಯೋತ್ಸವ ಸಮಾರಂಭ: ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ರಿಂದ ಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 6:59 IST
Last Updated 16 ಆಗಸ್ಟ್ 2025, 6:59 IST
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಮಾತನಾಡಿದರು
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಮಾತನಾಡಿದರು   

ಉಡುಪಿ: ಬೈಂದೂರಿನ ಮರವಂತೆಯಲ್ಲಿ ಹೊರ ಬಂದರು ವಿಸ್ತರಣಾ ಕಾಮಗಾರಿಯನ್ನು ₹85 ಕೋಟಿ ಮೊತ್ತದಲ್ಲಿ ಹಾಗೂ ಹೆಜಮಾಡಿ ಕೋಡಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಯನ್ನು ₹180.84 ಕೋಟಿ ಮೊತ್ತದಲ್ಲಿ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು, ಹಂಗಾರಕಟ್ಟೆಯಲ್ಲಿ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು ₹78.28 ಕೋಟಿ ಮೊತ್ತದಲ್ಲಿ, ಗಂಗೊಳ್ಳಿ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು ₹95.88 ಕೋಟಿ ಮೊತ್ತದಲ್ಲಿ ಹಾಗೂ ಗಂಗೊಳ್ಳಿ ಫಿಶ್ ಹಾರ್ಬರ್ ಉನ್ನತೀಕರಣ ಕಾಮಗಾರಿಯನ್ನು ₹22.18 ಕೋಟಿ ಮೊತ್ತದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕಡಲ್ಕೊರೆತ ತಡೆಗೆ ₹4.50 ಕೋಟಿ ಮೊತ್ತದಲ್ಲಿ 10 ಸ್ಥಳಗಳಲ್ಲಿ ತಡೆಗೋಡೆಗಳನ್ನು ನಿರ್ಮಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದೂ ತಿಳಿಸಿದರು.

ADVERTISEMENT

ನೈಸರ್ಗಿಕ ವಿಕೋಪಗಳಿಂದ ತತ್ತರಿಸಿದ ರೈತರಿಗೆ ಕ್ಷಿಪ್ರ, ಪಾರದರ್ಶಕ ಹಾಗೂ ನಿಖರವಾದ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಪರಿಹಾರ ತಂತ್ರಾಂಶವನ್ನು ಉನ್ನತೀಕರಿಸಿ, ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಪರಿಹಾರವನ್ನು ಜಮಾ ಮಾಡಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ಭೂದಾಖಲೆಗಳು ದಶಕಗಳಿಂದ ಕಗ್ಗಂಟಿನಲ್ಲಿದ್ದು, ಜನರು ತಾಲ್ಲೂಕು ಕಚೇರಿಗೆ ಅಲೆಯಬೇಕಿತ್ತು. ಅದಕ್ಕೆ ಪರಿಹಾರವಾಗಿ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದರೊಂದಿಗೆ ಸುರಕ್ಷಿತಗೊಳಿಸಲಾಗುತ್ತಿದೆ ಎಂದರು.

ಬಡತನ ನಿವಾರಣೆಗೆ ನೇರ ನಗದು ನೀಡುವ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ ₹47,400 ಕೋಟಿ ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ 2,25,131 ಫಲಾನುಭವಿಗಳಿಗೆ ₹870.83 ಕೋಟಿಯಷ್ಟು ಹಣ ಸಂದಾಯ ಮಾಡಲಾಗಿದೆ. ಅಕ್ಕ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸುವುದರೊಂದಿಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸದಸ್ಯರನ್ನಾಗಿಸಲಾಗುತ್ತಿದೆ ಎಂದು ಹೇಳಿದರು.

ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ. ಅಂಗನವಾಡಿಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ನಡೆಸಲು 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, 4 ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದರು.

ಪ್ರಸಕ್ತ ಸಾಲಿನಲ್ಲಿ ಪಶ್ಚಿಮ ವಾಹಿನಿ ಯೋಜನೆಯಡಿ ಜಿಲ್ಲೆಯಲ್ಲಿ 151 ಕೋಟಿ ವೆಚ್ಚದಲ್ಲಿ ಉಪ್ಪು ನೀರು ತಡೆ ಆಣೆಕಟ್ಟು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಇದರಿಂದ ಸುಮಾರು 192.52 ಹೆಕ್ಟೇರ್ ಪ್ರದೇಶದ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಒದಗಲಿದೆ ಎಂದು ಹೇಳಿದರು.

ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಭಾಗವಹಿಸಿದ್ದರು.

ಕಾಲೇಜು ವಿಭಾಗದ  ಪಥ ಸಂಚಲನದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಎನ್.ಸಿ.ಸಿ ಆರ್ಮಿ ಪ್ರಥಮ, ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಎನ್.ಸಿ.ಸಿ ನೇವಿ ದ್ವಿತೀಯ ಹಾಗೂ ಕುಂಜಿಬೆಟ್ಟು ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಎನ್.ಸಿ.ಸಿ ಆರ್ಮಿ ವಿಭಾಗ ದ್ವಿತೀಯ ಸ್ಥಾನ ಪಡೆಯಿತು.

ಪ್ರೌಢ ಶಾಲಾ ವಿಭಾಗದಲ್ಲಿ ಒಳಕಾಡು ಸರ್ಕಾರಿ ಪ್ರೌಢಶಾಲೆ ಪ್ರಥಮ, ಆವರ್ಸೆ ಸರ್ಕಾರಿ ಪ್ರೌಢಶಾಲೆ ದ್ವಿತೀಯ ಹಾಗೂ ಮಣಿಪಾಲದ ಮಾಧವ ಕೃಪಾ ಪ್ರೌಢಶಾಲೆ ತೃತೀಯ ಸ್ಥಾನ ಪಡೆಯಿತು ಮತ್ತು ಪ್ರಾಥಮಿಕ ಶಾಲಾ ವಿಭಾಗದಲ್ಲಿ ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ ಪ್ರಥಮ ಸ್ಥಾನ ಪಡೆಯಿತು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಕರ್ಷಕ ಪಥ ಸಂಚಲನ

ಉಡುಪಿ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಪರಿಶೀಲನಾ ಹಂತದಲ್ಲಿದೆ

-ಲಕ್ಷ್ಮಿ ಹೆಬ್ಬಾಳಕರ್ ಜಿಲ್ಲಾ ಉಸ್ತುವಾರಿ ಸಚಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.