ADVERTISEMENT

ಹೆಜಮಾಡಿಯಲ್ಲಿ ಟೋಲ್ ದರ ಯಥಾಸ್ಥಿತಿ ಇರಲಿ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 13:19 IST
Last Updated 3 ಡಿಸೆಂಬರ್ 2022, 13:19 IST
ಉಡುಪಿ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ವುವರಿ ಶುಲ್ಕ ಸಂಗ್ರಹಣೆ ವಿಚಾರವಾಗಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಸಭೆ ನಡೆಸಿದರು.
ಉಡುಪಿ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ವುವರಿ ಶುಲ್ಕ ಸಂಗ್ರಹಣೆ ವಿಚಾರವಾಗಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಸಭೆ ನಡೆಸಿದರು.   

ಉಡುಪಿ: ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಹಿಂದೆ ಪಡೆಯುತ್ತಿದ್ದ ಟೋಲ್ ದರ ಮಾತ್ರ ಪಡೆಯಬೇಕು. ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರ ವಸೂಲಿ ಮಾಡಬಾರದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು.

ಉಡುಪಿ ತಾಲ್ಲೂಕು ಕಚೇರಿಯಲ್ಲಿ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ವುವರಿ ಶುಲ್ಕ ಸಂಗ್ರಹಣೆ ವಿಚಾರವಾಗಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಸಚಿವರು, ಜಿಲ್ಲಾಡಳಿತ, ಜನಪ್ರತಿನಿಧಿಗಳ ಅಭಿಪ್ರಾಯ ಪಡೆಯದೆ ಸುರತ್ಕಲ್ ಟೋಲ್ ರದ್ದುಪಡಿಸಿ, ಹೆಜಮಾಡಿ ಟೋಲ್‌ನಲ್ಲಿ ವಿಲೀನಗೊಳಿಸಿ ಪರಿಷ್ಕೃತ ದರ ಪಡೆಯುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಧಾರ ಖಂಡನೀಯ.

ಟೋಲ್ ದರ ಹೆಚ್ಚಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಯಜಮಾಡಿಯಲ್ಲಿ ಹಿಂದಿನ ದರ ಮಾತ್ರ ಪಡೆಯಬೇಕು ಎಂದು ಸೂಚನೆ ನೀಡಿದರು.

ADVERTISEMENT

ಉಡುಪಿ ಜಿಲ್ಲೆಯ ವಾಹನಗಳಿಗೆ ಟೋಲ್‌ನಲ್ಲಿ ಪ್ರತ್ಯೇಕ ಲೇನ್ ವ್ಯವಸ್ಥೆ ಮಾಡಬೇಕು. ಸುರತ್ಕಲ್‌ನಲ್ಲಿ ಸ್ಥಳೀಯ ವಾಹನಗಳಿಗೆ ನೀಡುತ್ತಿದ್ದ ರಿಯಾಯಿತಿಯನ್ನು ಉಡುಪಿ ಜಿಲ್ಲೆಯ ವಾಹನಗಳಿಗೆ ನೀಡಬೇಕು ಎಂದು ಸಚಿವ ಸುನೀಲ್ ಕುಮಾರ್ ಹಾಗೂ ಶಾಸಕ ರಘುಪತಿ ಭಟ್ ಸಚಿವರಿಗೆ ತಿಳಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್‌.ವೀಣಾ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.