ADVERTISEMENT

ವಿದ್ಯುತ್ ಮಾರ್ಗ: ತೊಡಕು ನಿವಾರಣೆ

ಕುಂದಾಪುರದಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ಭರವಸೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 3:17 IST
Last Updated 17 ಆಗಸ್ಟ್ 2021, 3:17 IST
ಕುಂದಾಪುರದಲ್ಲಿ ಸೋಮವಾರ ಸಂಜೆ ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಕುಂದಾಪುರದಲ್ಲಿ ಸೋಮವಾರ ಸಂಜೆ ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.   

ಕುಂದಾಪುರ: ಕೊಲ್ಲೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಸಂಬಂಧಿಸಿದಂತೆ ಇರುವ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್‌ ಮಾರ್ಗಗಳ ತೊಡಕು ನಿವಾರಣೆ ಸಂಬಂಧ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ರಾಜ್ಯ ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವ ವಿ.ಸುನಿಲ್‌ಕುಮಾರ್ ಭರವಸೆ ನೀಡಿದರು.

ಕುಂದಾಪುರದ ಉಪ ವಿಭಾಗದ ಸರ್ಕಾರಿ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿನ ಬಿಜೆಪಿ ಆಡಳಿತ ಅವಧಿಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಗರಿಷ್ಠ ಸೌಲಭ್ಯ ಒದಗಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಂದಾಜು 50 ವೈದ್ಯಾಧಿಕಾರಿಗಳ ಹುದ್ದೆಗೆ ಮಂಜೂರಾತಿ ನೀಡಲಾಗಿತ್ತು. ಮೆಸ್ಕಾಂ, ಎಸ್ಕಾಂ ಸೇರಿದಂತೆ ರಾಜ್ಯದ ಬೇರೆ ಬೇರೆ ವಿದ್ಯುತ್ ನಿಗಮಗಳಲ್ಲಿ ಇರುವ ಸಮಸ್ಯೆಗಳ ಅಧ್ಯಯನ ನಡೆಸಿ ಪರಿಹಾರೋಪಾಯದ ಕುರಿತು ಚಿಂತನೆ ನಡೆಸಲಾಗುವುದು. ಇಂಧನ ಇಲಾಖೆಯಲ್ಲಿನ ತಳಮಟ್ಟದ ಸಮಸ್ಯೆಗಳ ಅರಿವಾಗಬೇಕಾದರೆ ಲೈನ್‌ಮೆನ್‌ ಅಭಿಪ್ರಾಯ ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ ಕಾರ್ಕಳದಲ್ಲಿ ಮೊದಲ ಬಾರಿಗೆ ಇಲಾಖೆ ಯಲ್ಲಿ ಕೆಲಸ ಮಾಡುವ ಲೈನ್‌ಮೆನ್‌ ಅವರೊಂದಿಗೆ ಬೆರೆತು ಅವರ ಅಭಿಪ್ರಾಯ ಆಲಿಸುವ ಪ್ರಯತ್ನ ಮಾಡಲಾಗಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಇನ್ನೂ ಮುಂದೆ ಎಸ್‌ಡಿಪಿಐ ಕಾರ್ಯಕರ್ತರ ಪುಂಡಾಟ ನಡೆಯುವುದಿಲ್ಲ. ರಾಜ್ಯದಲ್ಲಿ ಇನ್ನೂ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇದೆ ಎನ್ನುವ ಭ್ರಮೆಯಿಂದ ಅವರು ಹೊರ ಬರಲಿ’ ಎಂದು ಹೇಳಿದರು.

ADVERTISEMENT

ರಾಜ್ಯ ಆಹಾರ ನಿಗಮ ಉಪಾಧ್ಯಕ್ಷ ಕಿರಣಕುಮಾರ ಕೊಡ್ಗಿ, ಉಪ ವಿಭಾಗಾಧಿಕಾರಿ ಕೆ.ರಾಜು, ತಹಶೀಲ್ದಾರ್ ಕಿರಣ್ ಗೋರಯ್ಯ, ಪುರಸಭೆ ಉಪಾಧ್ಯಕ್ಷ ಸಂದೀಪ್ ಖಾರ್ವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.