ADVERTISEMENT

ಯುವಶಕ್ತಿಯ ಸದ್ಬಳಕೆಗೆ ಕಾರ್ಯಕ್ರಮ ರೂಪಿಸಿ

ನೆಹರೂ ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 14:33 IST
Last Updated 7 ಡಿಸೆಂಬರ್ 2020, 14:33 IST
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೆಹರೂ ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೆಹರೂ ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು.   

ಉಡುಪಿ: ಜಿಲ್ಲೆಯ ಯುವಕ ಸಂಘಗಳಲ್ಲಿರುವ ಯುವಕರು ವೈವಿಧ್ಯಮಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಅವರಿಗೆ ಅಗತ್ಯ ತರಬೇತಿ ನೀಡಬೇಕು. ಯುವಶಕ್ತಿಯನ್ನು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಿ ಬಳಸಿಕೊಳ್ಳುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನೆಹರೂ ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನೆಹರೂ ಯುವಕೇಂದ್ರದ ಮೂಲಕ ಜಿಲ್ಲೆಯಲ್ಲಿ ನೋಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಸಮಾಜ ಸೇವೆಯ ಗುಣ, ಕೌಶಲಹಾಗೂ ಸಾಹಸಿ ಪ್ರವೃತ್ತಿಯನ್ನು ಬೆಳೆಸಲು ಪೂರಕವಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.

ಯುವಕ–ಯುವತಿಯರಿಗೆ ವಿಕೋಪ ನಿರ್ವಹಣೆ ಸೇರಿದಂತೆ ಅತ್ಯವಶ್ಯಕ ಸಂದರ್ಭದಲ್ಲಿ ಸಮಾಜದ ನೆರವಿಗೆ ಧಾವಿಸುವಂತಹ ತರಬೇತಿ ಕೊಟ್ಟು ತುರ್ತು ಸಂದರ್ಭದಲ್ಲಿ ಯುವಕರ ಸೇವೆಯನ್ನು ಜಿಲ್ಲಾಡಳಿತದ ನೆರವಿಗೆ ಬಳಸಿಕೊಳ್ಳಿ. ನೆಹರೂ ಯುವ ಕೇಂದ್ರದಿಂದ ಸಿದ್ಧಪಡಿಸುವ ವಾರ್ಷಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ಯುವಕರು ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಸಲಹೆ ನೀಡಿದರು.

ADVERTISEMENT

ಉತ್ತಮವಾಗಿ ಕಾರ್ಯನಿರ್ವಹಿಸುವ ಯುವ ತಂಡಗಳನ್ನು ಪ್ರೋತ್ಸಾಹಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುವಂತಹ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅಗತ್ಯ ತರಬೇತಿ ನೀಡಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವಂತಹ ತರಬೇತಿ ಹಾಗೂ ಸ್ವಚ್ಚತಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸುವುದು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಯುವ ಜನತೆ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯರ್ಥವಾಗಿ ಕಾಲ ಕಳೆಯುವುದರ ಬದಲು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಿ. ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮ ರೂಪಿಸಿ ಎಂದು ಸಲಹೆ ನೀಡಿದರು.

ಜಿಲ್ಲಾ ನೆಹರೂ ಯುವ ಕೇಂದ್ರದ 2020-21ನೇ ಸಾಲಿನಲ್ಲಿ ಏರ್ಪಡಿಸಲಾಗುವ ವಾರ್ಷಿಕ ಕಾರ್ಯಕ್ರಮಗಳ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು. ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರೂ ಯುವ ಕೇಂದ್ರದ ವಿಷ್ಣುಮೂರ್ತಿ ಇದ್ದರು. ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಫ್ರೆಡ್‌ ಡಿಸೋಜಾ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.