ಉಡುಪಿ: ‘ಕಾರ್ಕಳದ ಬೈಲೂರಿನ ಉಮಿಕ್ಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿಯನ್ನು ತಿಂಗಳೊಳಗೆ ಆರಂಭಿಸದಿದ್ದರೆ ಸೆಪ್ಟೆಂಬರ್ 6ರಂದು ಬೈಲೂರಿನಲ್ಲಿ ಪಾದಯಾತ್ರೆ ನಡೆಸಲಾಗುವುದು’ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಕಾರ್ಕಳದ ಪ್ರವಾಸೋದ್ಯಮವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಕಾರ್ಕಳದಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಹಮ್ಮಿಕೊಂಡಿದ್ದ ವಾಹನ ಜಾಥಾದ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಪರಶುರಾಮ ಥೀಮ್ ಪಾರ್ಕ್ ನಮಗೆ ಮುಂದಿನ ಚುನಾವಣೆ ವಿಷಯವಲ್ಲ. ಅದು ಪ್ರವಾಸೋದ್ಯಮ ಕೇಂದ್ರವಾಗಬೇಕು ಎನ್ನುವುದು ನಮ್ಮ ಉದ್ಧೇಶ’ ಎಂದು ಹೇಳಿದರು.
‘ಪರಶುರಾಮ ಮೂರ್ತಿಯ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದೂ ಅವರು ಒತ್ತಾಯಿಸಿದರು.
‘ಪರಶುರಾಮ ಮೂರ್ತಿ ವಿಚಾರದಲ್ಲಿ ಕಾರ್ಕಳದ ಕಾಂಗ್ರೆಸ್ ಜನರ ದಾರಿ ತಪ್ಪಿಸುವ ಕೆಲಸ ಮಾಡಿದೆ’ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರು, ಪ್ರಮುಖರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಮುಟ್ಲುಪಾಡಿ ಸತೀಶ್ ಶೆಟ್ಟಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.