ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನ ಆಧುನೀಕರಣದ ₹22 ಕೋಟಿ ಮೊತ್ತದ ಯೋಜನೆಗೆ ಈಗಾಗಲೇ ಟೆಂಡರ್ ಆಗಿದ್ದು, ಕಾರ್ಯಾದೇಶ ಇನ್ನಷ್ಟೇ ಬರಬೇಕಾಗಿದೆ. ಜೂನ್ ತಿಂಗಳಲ್ಲಿ ಶಿಲಾನ್ಯಾಸ ನಡೆಯಲಿದೆ ಎಂದು ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಲ್ಪೆ ಯಾಂತ್ರಿಕ(ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ನಿರ್ಮಾಣಗೊಂಡ ಸಾರ್ವಜನಿಕ ಮಹಿಳಾ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು
ಬಂದರಿನ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು. ಕೇಂದ್ರ ಸರ್ಕಾರದ ಸಹಕಾರದಿಂದ ಅಗತ್ಯ ಯೋಜನೆಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಹೇಳಿದರು.
ಮಹಿಳಾ ಶೌಚಾಲಯವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ಮಹಿಳೆಯರಿಗೆ ಬಹಳ ಅವಶ್ಯವಾದ ಮಹಿಳಾ ಶೌಚಾಲಯನ್ನು ನಿರ್ಮಿಸಿರುವುದು ಮಾದರಿ ಕಾರ್ಯ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಶುದ್ಧ ಕುಡಿಯುವ ನೀರಿನ ಘಟಕವನ್ನು ನಾಗರಾಜ್ ರಾವ್ ಕೆ. ಉದ್ಘಾಟಿಸಿದರು. ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಭಾರತೀಯ ಸೇನೆಗೆ ₹10 ಲಕ್ಷವನ್ನು ಶಾಸಕರ ಮೂಲಕ ಉಡುಪಿ ಜಿಲ್ಲಾಧಿಕಾರಿಗೆ ನೀಡಲಾಯಿತು.
ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ.ಸುವರ್ಣ, ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ ಸಮಿತಿಯ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಪ್ರಕಾಶ್ ಬಂಗೇರ ವಂದಿಸಿದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.