ADVERTISEMENT

ಪ್ಲಾಸ್ಟಿಕ್‌ ನಿರ್ಬಂಧ ಸರ್ಕಾರಿ ಕಚೇರಿಗಳಿಂದಲೇ ಆರಂಭವಾಗಬೇಕು

ಪ್ಲಾಸ್ಟಿಕ್‌ ಮುಕ್ತ ಆಂದೋಲನ ಉದ್ಘಾಟಿಸಿ ಜಿಪಂ ಅಧ್ಯಕ್ಷ ದಿನಕರ ಬಾಬು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2019, 5:29 IST
Last Updated 20 ಸೆಪ್ಟೆಂಬರ್ 2019, 5:29 IST
ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಗುರುವಾರ ನಡೆದ ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಆಂದೋಲನ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು ಮಾತನಾಡಿದರು.
ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಗುರುವಾರ ನಡೆದ ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಆಂದೋಲನ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು ಮಾತನಾಡಿದರು.   

ಉಡುಪಿ: ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಅಚಾತುರ್ಯದಿಂದ ಪ್ಲಾಸ್ಟಿಕ್‌ ಬಳಕೆ ಮಾಡುತ್ತಿರುವುದು ಕಂಡುಬರುತ್ತಿದೆ. ಸರ್ಕಾರವೇ ರೂಪಿಸಿದ ಕಾನೂನುಗಳನ್ನು ಸರ್ಕಾರಿ ಅಧಿಕಾರಿಗಳೇ ಪಾಲಿಸದಿದ್ದರೆ, ಕಾನೂನಿಗೆ ಬೆಲೆ ಇರುವುದಿಲ್ಲ. ಹಾಗಾಗಿ ಪ್ಲಾಸ್ಟಿಕ್‌ ನಿರ್ಮೂಲನೆ ಕ್ರಮಗಳು ಸರ್ಕಾರಿ ಕಚೇರಿಗಳಿಂದಲೇ ಆರಂಭವಾಗಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ಗುರುವಾರ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾದ ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತ ಆಂದೋಲನ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ಸುತ್ತಿರುವ ಹೂಗುಚ್ಚಗಳನ್ನು ನೀಡುವುದಕ್ಕೆ ಕಡಿವಾಣ ಹಾಕಬೇಕು. ಜಿಲ್ಲೆಯಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಮತ್ತು ಪ್ಲಾಸ್ಟಿಕ್‌ ಬಳಕೆ ದುಷ್ಪರಿಣಾಮಗಳ ಬಗ್ಗೆ ಜನಜಾಗೃತಿ ಮೂಡಿಸಲು ಗ್ರಾಮೀಣ ಮಟ್ಟದಲ್ಲಿ 15 ದಿನಗಳ ಕಾಲ 30 ಗ್ರಾಮಗಳಲ್ಲಿ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥಾವು ಹಳ್ಳಿಹಳ್ಳಿಗಳಿಗೆ ತೆರಳಿ ಬೀದಿ ನಾಟಕದ ಮೂಲಕ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಿದೆ ಎಂದರು.

ADVERTISEMENT

ಇಲಾಖೆಗಳ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳು, ಶಾಲೆ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಸ್ವಚ್ಚ ಸರ್ವೇಕ್ಷಣ್‌ ಆಪ್‌ನಲ್ಲಿ ಕಡ್ಡಾಯವಾಗಿ ಭಾಗವಹಿಸಿ ಜಿಲ್ಲೆ ಪ್ರಥಮ ಶ್ರೇಣಿಯಲ್ಲಿ ಬರುವಂತಾಗಬೇಕು ಎಂದು ಹೇಳಿದರು.

ಸ್ವಚ್ಛತಾ ಆಂದೋಲನದ ಕರಪತ್ರ ಬಿಡುಗಡೆ ಮಾಡಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಮಾತನಾಡಿ, ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಪ್ಲಾಸ್ಟಿಕ್‌ ನಿಷೇಧಿಸುವ ನಿರ್ಧಾರವನ್ನು ಕೈಗೊಂಡ ರಾಜ್ಯ ಕರ್ನಾಟಕ. ಆದರೆ ಪ್ಲಾಸ್ಟಿಕ್‌ ಬಳಕೆಯ ನಿರ್ಬಂಧವನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವಲ್ಲಿ ವಿಫಲರಾಗಿದ್ದೇವೆ. ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಅರಿವಿರುವವರೇ ಕಾನೂನನ್ನು ಪಾಲಿಸದಿದ್ದಲ್ಲಿ ಸಾರ್ವಜನಿಕರಿಗೆ ಹೇಳುವ ನೈತಿಕತೆ ಇರುವುದಿಲ್ಲ. ಪ್ಲಾಸ್ಟಿಕ್‌ ಬಳಕೆ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕಾನೂನಿನಲ್ಲಿ ದಂಡದ ವ್ಯವಸ್ಥೆ ಇದ್ದರೂ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶಶಿಕಂತ್‌ ಪಡುಬಿದ್ರಿ, ಜಿಪಂ ಸದಸ್ಯೆ ರೇಷ್ಮಾ ಉದಯ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್‌ ಉಪಸ್ಥಿತರಿದ್ದರು. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್‌ ರಾವ್‌ ಸ್ವಾಗತಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.