
ಉಡುಪಿ: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರನ್ನು ನೋಂದಣಿ ಮಾಡಿಸುವುದರೊಂದಿಗೆ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಸಂಘಟಿತ ವಲಯದ ಕಾರ್ಮಿಕರನ್ನು ಯೋಜನೆಯಡಿ ನೋಂದಾಯಿಸಲು ಜಿಲ್ಲೆಯಲ್ಲಿ ಈಗಾಗಲೇ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಅದು ಮಾರ್ಚ್ 15 ರ ವರೆಗೆ ನಡೆಯಲಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊದಲನೇ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿ, ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದರು.
ಆದಾಯ ತೆರಿಗೆ ಪಾವತಿದಾರರು, ಸಂಘಟಿತ ವಲಯದ ಕಾರ್ಮಿಕರು, ಇ.ಎಸ್.ಐ/ ಪಿ.ಎಫ್ ಯೋಜನೆಗೆ ಒಳಪಟ್ಟವರು ಈ ಯೋಜನೆಗೆ ಅರ್ಹರಲ್ಲ ಎಂದರು.
ಅಸಂಘಟಿತ ಕಾರ್ಮಿಕರು ಹೆಚ್ಚು ವಾಸಿಸುವ ಪ್ರದೇಶಗಳು, ಕಾರ್ಮಿಕರು ಸೇರುವಂತಹ ವಿವಿಧ ಇಲಾಖೆಗಳ ಸಭೆಗಳಲ್ಲಿ ಈ ಯೋಜನೆಯ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ನೋಂದಣಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯ ವಿಶೇಷ ನೋಂದಣಿ ಅಭಿಯಾನದಡಿ ಜಿಲ್ಲೆಯಲ್ಲಿ 7,275 ಕಾರ್ಮಿಕರನ್ನು ನೋಂದಾಯಿಸಲು ಗುರಿ ನಿಗದಿಪಡಿಸಲಾಗಿದ್ದು, ಯೋಜನೆ ಪ್ರಾರಂಭದಿಂದ ಈವರೆಗೆ 7,225 ಮಂದಿ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಪೌರಾಯುಕ್ತ ಮಹಾಂತೇಶ್ ಹಂಗರಗಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.