ADVERTISEMENT

ಉಡುಪಿ: 71,076 ಮಕ್ಕಳಿಗೆ ಪೋಲಿಯೋ ಲಸಿಕೆ

ಪೋಲಿಯೋ ನಿರ್ಮೂಲನೆಗೆ ಸಹಕರಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಮನವಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2022, 2:56 IST
Last Updated 28 ಫೆಬ್ರುವರಿ 2022, 2:56 IST
ಉಡುಪಿಯ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಮೆಮೊರಿಯಲ್‌ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಗುವಿಗೆ ಪೋಲಿಯೋ ಹನಿ ಹಾಕಿದರು.
ಉಡುಪಿಯ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಮೆಮೊರಿಯಲ್‌ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಮಗುವಿಗೆ ಪೋಲಿಯೋ ಹನಿ ಹಾಕಿದರು.   

ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಡಿ 5 ವರ್ಷದೊಳಗಿನ 73,995 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಭಾನುವಾರ 71,076 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ 96.06ರಷ್ಟು ಸಾಧನೆಯಾಗಿದೆ.

ಉಡುಪಿಯ ಕೂಸಮ್ಮ ಶಂಭುಶೆಟ್ಟಿ ಹಾಜಿ ಅಬ್ದುಲ್ಲ ಮೆಮೊರಿಯಲ್‌ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿ, ದೇಶದಲ್ಲಿ 2011ರಿಂದ ಪೋಲಿಯೋ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ, ನೆರೆಯ ದೇಶದಲ್ಲಿ ಪೋಲಿಯೋ ಪ್ರಕರಣಗಳಿದ್ದು, ಅಲ್ಲಿಂದ ಬರುವ ಪ್ರಯಾಣಿಕರ ಮೂಲಕ ಪೋಲಿಯೋ ದೇಶದೊಳಗೆ ಹರಡುವ ಸಾಧ್ಯತೆಗಳು ಇರುತ್ತವೆ. ಹಾಗಾಗಿ, ಪೋಷಕರು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಆತಂಕದಿಂದ ದೂರವಿರಬೇಕು ಎಂದರು.

ADVERTISEMENT

ಗ್ರಾಮೀಣ ಪ್ರದೇಶದಲ್ಲಿ 571 ಹಾಗೂ ನಗರ ಪ್ರದೇಶದಲ್ಲಿ 91 ಸೇರಿ 662 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 6 ಮೊಬೈಲ್ ತಂಡಗಳನ್ನು ರಚಿಸಲಾಗಿದೆ. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಿದ್ದಾರೆ. 36 ಟ್ರಾನ್ಸಿಟ್ ಬೂತ್‌ಗಳಿದ್ದು ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಪೋಲಿಯೋ ಹಾಕಲಿದ್ದಾರೆ ಎಂದರು.

2,794 ಲಸಿಕಾ ಸ್ವಯಂಸೇವಕರು ಹಾಗೂ 125 ಮೇಲ್ವಿಚಾರಕರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಲಸಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ರೋಟರಿ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳು ಸಹಕಾರ ನೀಡುತ್ತಿವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಂ.ಜಿ.ರಾಮ, ಉಡುಪಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಡುಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸ್ವರ್ಣಲತಾ, ರೋಟರಿ ಅಧ್ಯಕ್ಷ ಸುರೇಶ್ ಶೆಣ್ಯೆ, ಐ.ಕೆ.ಜಯಚಂದ್ರ ಇದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಣಾಧಿಕಾರಿ ಡಾ. ನಾಗಭೂಷಣ ಉಡುಪ ಸ್ವಾಗತಿಸಿದರು, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.