ADVERTISEMENT

ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಸಲಹೆ

ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 7:26 IST
Last Updated 17 ಡಿಸೆಂಬರ್ 2025, 7:26 IST
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು   

ಉಡುಪಿ: ಪಲ್ಸ್ ಪೋಲಿಯೊ ಕಾರ್ಯಕ್ರಮವು ಡಿ. 21ರಂದು ಜಿಲ್ಲೆಯಾದ್ಯಂತ ನಡೆಯಲಿದ್ದು, ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ 5 ವರ್ಷ ವಯಸ್ಸಿನೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ನೀಡುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಡಿ ಸುಮಾರು 657 ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಲಸಿಕೆ ಹಾಕಲಾಗುವುದು. ಲಸಿಕಾ ದಿನದಂದು ಲಸಿಕೆ ನೀಡಲು ಗುರುತಿಸಲಾದ ಶಾಲೆಗಳನ್ನು ತೆರೆದು ಲಸಿಕೆ ನೀಡಲು ಸಜ್ಜುಗೊಳಿಸಲು, ಲಸಿಕೆ ಸಾಗಣೆಗೆ ಅಗತ್ಯವಿರುವ ವಾಹನಗಳ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಲಸಿಕೆಯಿಂದ ಹೊರಗುಳಿಯುವ ಮಕ್ಕಳಿಗೆ ಗ್ರಾಮೀಣ ಭಾಗದಲ್ಲಿ ಡಿ. 22ರಿಂದ 23ರವರೆಗೆ ಹಾಗೂ ನಗರ ಭಾಗಗಳಲ್ಲಿ ಡಿ. 22ರಿಂದ 24ರವರೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಮನೆ-ಮನೆಗೆ ತೆರಳಿ ಲಸಿಕೆ ಹಾಕಲಿದ್ದಾರೆ ಎಂದರು.

ವಲಸೆ ಕಾರ್ಮಿಕರ, ಕಟ್ಟಡ ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಲಸಿಕಾ ಕಾರ್ಯಕ್ರಮದಿಂದ ಹೊರಗುಳಿಯದಂತೆ ಹೆಚ್ಚು ಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ. ಇದ್ದರು.

‘75395 ಮಕ್ಕಳಿಗೆ ಲಸಿಕೆ’

ಜಿಲ್ಲೆಯಲ್ಲಿ 5 ವರ್ಷ ವಯಸ್ಸಿನೊಳಗಿನ ಒಟ್ಟು 75395 ಮಕ್ಕಳನ್ನು ಈಗಾಗಲೇ ಲಸಿಕೆ ನೀಡಲು ಗುರುತಿಸಲಾಗಿದೆ. ಮಕ್ಕಳಿಗೆ ಲಸಿಕೆ ನೀಡಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳ ಜೊತೆಯಲ್ಲಿ 16 ಟ್ರಾನ್ಸಿಟ್ ಬೂತ್‌ಗಳು 5 ಮೊಬೈಲ್ ತಂಡಗಳಿದ್ದು 2180 ಮಂದಿ ಸಿಬ್ಬಂದಿ ಹಾಗೂ 155 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ನಗರಸಭಾ ವ್ಯಾಪ್ತಿಯಲ್ಲಿ 272 ಸ್ವಯಂ ಸೇವಕರನ್ನು ನಿಯೋಜಿಸಲಾಗಿದ್ದು ಅವರಿಗೆ ಲಸಿಕೆ ನೀಡುವ ಬಗ್ಗೆ ತರಬೇತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ತಿಳಿಸಿದರು.

ಪೋಲಿಯೊ ಲಸಿಕೆಯ ಸುರಕ್ಷಿತ ದಾಸ್ತಾನಿನ ಬಗ್ಗೆ ಗಮನ ಹರಿಸಿ ಲಸಿಕೆ ಹಾಳಾಗದಂತೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು. ಲಸಿಕೆಯ ಸುರಕ್ಷಿತ ವಿತರಣೆಗೆ ಅಧಿಕಾರಿಗಳು ಕ್ರಮವಹಿಸಬೇಕು.
-ಸ್ವರೂಪಾ ಟಿ.ಕೆ., ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.