ಸಾಲಿಗ್ರಾಮದ ಪಡುಕರೆಯಲ್ಲಿ ನಮ್ಮ ಕ್ಲಿನಿಕ್ ಅನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು
ಸಾಲಿಗ್ರಾಮ (ಬ್ರಹ್ಮಾವರ): ಸರ್ಕಾರ ರೂಪಿಸುವ ಕಾರ್ಯಕ್ರಮಗಳು ಸಾಮಾನ್ಯ ಜನರ ಬಾಳಿಗೆ ಬೆಳಕು ಚೆಲ್ಲುವ ಯೋಜನೆಗಳಾಗಿ ರೂಪುಗೊಂಡಿವೆ. ನಮ್ಮ ಕ್ಲಿನಿಕ್ ಜನರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಕಾರ್ಯಕ್ರಮಗಳಲ್ಲಿ ಒಂದಾಗಿದೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆಯಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕ್ ಅನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಮಧುಮೇಹ ಮತ್ತು ರಕ್ತದೊತ್ತಡದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಬಹು ಅಂಗಾಂಗ ವೈಫಲ್ಯಕ್ಕೆ ದಾರಿಯಾಗುತ್ತದೆ. ಪ್ರತಿ ಎರಡು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಪ್ರಾಥಮಿಕ ಹಂತದಲ್ಲೆ ರೋಗದ ಲಕ್ಷಣಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ನೆರವಾಗಬೇಕು ಎಂದು ಸಲಹೆ ಹೇಳಿದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಸವರಾಜ ಜಿ. ಹುಬ್ಬಳ್ಳಿ, ಬ್ರಹ್ಮಾವರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಅನುಸೂಯ ಹೇರ್ಳೆ, ವಾರ್ಡ್ ಸದಸ್ಯೆ ರೇಖಾ ಕೇಶವ ಕರ್ಕೇರ, ಆರೋಗ್ಯ ನಿರೀಕ್ಷಕಿ ಮಮತಾ, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಾಘವೇಂದ್ರ ರಾವ್, ಪಟ್ಟಣ ಪಂಚಾಯಿತಿ ಸದಸ್ಯರಾದ ರಾಜು ಪೂಜಾರಿ ಕಾರ್ಕಡ, ಪುನಿತ್ ಪೂಜಾರಿ, ಸುಲತಾ ಹೆಗ್ಡೆ, ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್, ನಮ್ಮ ಕ್ಲಿನಿಕ್‌ನ ಡಾ.ಸುಶ್ಮಿತಾ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರೋಗ್ಯ ಇಲಾಖೆಯ ಮಂಜುನಾಥ ನಿರೂಪಿಸಿದರು.
ಕೊಳಗೇರಿ ನಿವಾಸಿಗಳು, ದಿನಗೂಲಿ ಕಾರ್ಮಿಕರು, ಸಮಾಜದ ಇತರ ದುರ್ಬಲ ವರ್ಗಗಳಿಗೆ ಸುಲಭವಾಗಿ ವೈದ್ಯಕೀಯ ಸೇವೆ ದೊರಕಿಸಬೇಕು ಎಂಬ ಉದ್ದೇಶದಿಂದ ನಮ್ಮ ಕ್ಲಿನಿಕ್ಗಳು ಕಾರ್ಯ ಮಾಡುತ್ತಿವೆಡಾ.ವಾಸುದೇವ, ತಾಲ್ಲೂಕು ಆರೋಗ್ಯ ಅಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.