ADVERTISEMENT

‘ಪ.ಪಂ. ವ್ಯಾಪ್ತಿಯಿಂದ ಹಳ್ಳಿಗಳನ್ನು ಕೈಬಿಡಿ’

ಬೈಂದೂರು ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2025, 5:39 IST
Last Updated 20 ಸೆಪ್ಟೆಂಬರ್ 2025, 5:39 IST
ಪ್ರತಿಭಟನಕಾರರು ಪಡಿಮಂಚಕ್ಕೆ ಬೈಹುಲ್ಲು ಬಡಿಯುವ ಮೂಲಕ ಪ್ರತಿಭಟಿಸಿದರು
ಪ್ರತಿಭಟನಕಾರರು ಪಡಿಮಂಚಕ್ಕೆ ಬೈಹುಲ್ಲು ಬಡಿಯುವ ಮೂಲಕ ಪ್ರತಿಭಟಿಸಿದರು   

ಉಡುಪಿ: ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿ ತಾಲ್ಲೂಕು ರೈತ ಸಂಘದ ನೇತೃತ್ವದಲ್ಲಿ ರೈತರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಐದು ವರ್ಷಗಳ ಹಿಂದೆ ಸ್ಥಳೀಯರು ಹಾಗೂ ವಿವಿಧ ಪಕ್ಷಗಳೊಂದಿಗೆ ಚರ್ಚಿಸದೆ ಅಧಿಕಾರಿಗಳು ಪಟ್ಟಣ ಪಂಚಾಯಿತಿ ರಚಿಸಿದ್ದು, ಇದುವರೆಗೆ ಚುನಾವಣೆ ನಡೆದು ಅದು ಅಸ್ತಿತ್ವಕ್ಕೆ ಬಂದಿಲ್ಲ ಎಂದರು.

ಬೈಂದೂರು ಪಟ್ಟಣ ಪಂಚಾಯಿತಿ 54 ಕಿ.ಮೀ. ವ್ಯಾಪ್ತಿಯನ್ನು ಹೊಂದಿದ್ದು, ಅದರಲ್ಲಿ ಶೇ 47ರಷ್ಟು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿದೆ. ಇದರಿಂದ ಅಲ್ಲಿನ ಜನರು ಸರ್ಕಾರದ ವಿವಿಧ ಯೋಜನೆಗಳಿಗಿಂತ ವಂಚಿತರಾಗಿದ್ದಾರೆ ಎಂದು ಹೇಳಿದರು. ಅಕ್ರಮ–ಸಕ್ರಮ, ಕೃಷಿ ಸೌಲಭ್ಯಗಳೂ ದೊರೆಯದೆ ತೊಂದರೆಯಾಗುತ್ತಿದೆ ಎಂದು ದೂರಿದರು.

ADVERTISEMENT

‌ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಭಾಗಗಳನ್ನು ಕೈಬಿಡುವಂತೆ ಈಗಾಗಲೇ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದೇವೆ. ಜಿಲ್ಲಾಧಿಕಾರಿ 11 ವಾರ್ಡ್‌ಗಳಿರುವ ಹೊಸ ಬೈಂದೂರು ಪಟ್ಟಣ ಪಂಚಾಯಿತಿ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅದನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಪಟ್ಟಣ ಪಂಚಾಯಿತಿ ನಿಯಮಗಳಿಂದಾಗಿ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿಗೆ ತೊಂದರೆಯಾಗುತ್ತಿದೆ. ಗ್ರಾಮೀಣ ಭಾಗಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಬೇರ್ಪಡಿಸಿ ಗ್ರಾಮ ಪಂಚಾಯಿತಿಯಾಗಿ ಮಾರ್ಪಡಿಸಬೇಕು ಎಂದೂ ಅವರು ಒತ್ತಾಯಿಸಿದರು.

ಬೈಂದೂರು ವ್ಯಾಪ್ತಿಯಲ್ಲಿ ಹಲವಾರು ಕುಗ್ರಾಮಗಳಿದ್ದು, ಅಲ್ಲಿನ ಜನರಿಗೆ ಕೃಷಿಯೇ ಜೀವನಾಧಾರವಾಗಿದೆ. ಅಭಿವೃದ್ದಿ ಹೆಸರಿನಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರಿಸಿರುವುದರಿಂದ ರೈತರಿಗೆ ಸಮಸ್ಯೆಯಾಗಿದೆ. ಮೂಲಸೌಕರ್ಯಗಳು ಸಿಗುತ್ತಿಲ್ಲ ಎಂದು ತಿಳಿಸಿದರು. ನಮ್ಮ ಬೇಡಿಕೆ ಈಡೇರುವವರೆಗೆ ಬೈಂದೂರಿನಲ್ಲಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಹೇಳಿದರು.

ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ರಸ್ತೆಯಲ್ಲಿ ಕುಳಿತು ಘೋಷಣೆಗಳನ್ನು ಕೂಗಿದ ಪ್ರತಿಭಟನಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪಡಿ ಮಂಚಕ್ಕೆ ಬೈಹುಲ್ಲನ್ನು ಬಡಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರಮುಖರಾದ ಅರುಣ್ ಕುಮಾರ್, ವೀರಭದ್ರ ಗಾಣಿಗ, ಕೃಷ್ಣ ದೇವಾಡಿಗ, ಮ್ಯಾಥ್ಯು, ನಾಗರಾಜ್ ಮರಾಠೆ ಭಾಗವಹಿಸಿದ್ದರು.

ರೈತರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.