
ಉಡುಪಿ: ‘ಮತ ಕಳವು ಬಗ್ಗೆ ವ್ಯಾಪಕ ಪ್ರಚಾರ ಮಾಡಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಹಾರ ವಿಧಾನಸಭಾ ಚುನಾವಣೆಯ ಬಳಿಕ ಕಾಣೆಯಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗಾರರ ಜೊತೆಗೆ ಬುಧವಾರ ಇಲ್ಲಿ ಮಾತನಾಡಿದ ಅವರು ‘ಇಂತಹ ಫಲಿತಾಂಶವನ್ನು ರಾಹುಲ್ ಗಾಂಧಿ ಅವರು ನಿರೀಕ್ಷೆ ಮಾಡಿರಲಿಕ್ಕಿಲ್ಲ. ಬಿಹಾರದ ಜನ ಕಾಂಗ್ರೆಸ್ ಕಪಾಳ ಮೋಕ್ಷ ಮಾಡಿದ್ದಾರೆ. ಇನ್ನಾದರೂ ಅವರು ಎಚ್ಚೆತ್ತುಕೊಂಡು ಜವಾಬ್ದಾರಿಯಿಂದ ಕೆಲಸ ಮಾಡಲಿ’ ಎಂದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಎರಡು, ಮೂರು ತಿಂಗಳುಗಳಿಂದ ಡಿಕೆಶಿ ಅವರು ಮಾರ್ಮಿಕವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗೆ ದಿನೇ ದಿನೇ ಪೈಪೋಟಿ ಹೆಚ್ಚಾಗುತ್ತಿದೆ’ ಎಂದು ಹೇಳಿದರು.
‘ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಚುನಾಯಿತ ಸರ್ಕಾರ ಇದೆ ಎನ್ನುವುದೇ ಜನರಿಗೆ ಮರೆತು ಹೋಗಿದೆ. ಬಡವ, ರೈತ, ಹಿಂದೂ ವಿರೋಧಿ ಸರ್ಕಾರ ರಾಜ್ಯದಲ್ಲಿದೆ. ಈ ಸರ್ಕಾರವನ್ನು ಕಿತ್ತು ಹಾಕಿದರೆ ಜನರಿಗೆ ಅನುಕೂಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.