ADVERTISEMENT

ಉಡುಪಿ| ₹100 ಕೋಟಿ ಕಾಮಗಾರಿಗೆ ಅನುಮೋದನೆ: ಸಂಸದ ಕೋಟ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 4:37 IST
Last Updated 15 ಜನವರಿ 2026, 4:37 IST
ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿತು
ಉಡುಪಿ ರೈಲು ನಿಲ್ದಾಣದಲ್ಲಿ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆ ನೆರವೇರಿತು   

ಉಡುಪಿ: ಕರಾವಳಿ ಜಿಲ್ಲೆಗಳ ಎಲ್ಲಾ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲು ₹100 ಕೋಟಿಯ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಉಡುಪಿ ರೈಲು ನಿಲ್ದಾಣ ಪರಿಸರದಲ್ಲಿ ಕೊಂಕಣ ರೈಲ್ವೆ ಕಾರ್ಪೊರೇಷನ್ ನಿರ್ಮಿಸಿದ ಪ್ರಯಾಣಿಕರ ಸೌಲಭ್ಯಗಳ ಉದ್ಘಾಟನೆಯನ್ನು ಬುಧವಾರ ನೆರವೇರಿಸಿ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಪ್ರಥಮ ಹಂತದ ಕಾಮಗಾರಿಗಳಲ್ಲಿ ಪ್ಲಾಟ್ ಫಾರ್ಮ್ 2 ಅನ್ನು ₹2.6 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಹಿರಿಯ ನಾಗರಿಕರ ಅನುಕೂಲಕ್ಕಾಗಿ ಮೂರು ಲಿಫ್ಟ್‌ಗಳನ್ನು ಅಳವಡಿಸಲಾಗುವುದು. ಬಾರಕೂರು-ಮುಲ್ಕಿ ರೈಲ್ವೆ ಪ್ಲಾಟ್ ಫಾರ್ಮ್‌ಗಳನ್ನು ₹4.28 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ₹ 105 ಕೋಟಿ ವೆಚ್ಚದಲ್ಲಿ 10 ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರದಿಂದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು.

ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ ಉಡುಪಿ ರೈಲು ನಿಲ್ದಾಣಕ್ಕೆ ಹೊಸ ಕಾಯಕಲ್ಪ ನೀಡಲಾಗುವುದು. ಮಂಗಳೂರಿನಿಂದ ಕಾರವಾರದವರೆಗೆ ದ್ವಿಪಥ ರೈಲ್ವೆ ಹಳಿಗಳು ಈಗಿನ ಅವಶ್ಯಕತೆಯಾಗಿದ್ದು, ಅದಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸಚಿವರಿಗೆ ಸಲ್ಲಿಸಲಾಗುವುದು ಎಂದರು.

ADVERTISEMENT

ಮಡಗಾಂವ್ - ಮಂಗಳೂರು ವಂದೇ ಭಾರತ್ ರೈಲನ್ನು ಮುಂಬೈವರೆಗೆ ಮತ್ತು ಬೆಂಗಳೂರು-ಮಂಗಳೂರು ರೈಲನ್ನು ಕಾರವಾರದವರೆಗೆ ವಿಸ್ತರಣೆ ಮಾಡಿದಲ್ಲಿ ಕರಾವಳಿಯ ಜನರಿಗೆ ಅನುಕೂಲವಾಗಲಿದ್ದು, ಈ ನಿಟ್ಟಿನಲ್ಲಿ ಕೊಂಕಣ ರೈಲ್ವೆಯೊಂದಿಗೆ ಸಮಾಲೋಚಿಸಿ ಅಡಚಣೆಗಳನ್ನು ನಿವಾರಿಸುವ ಹಾಗೂ ಉಡುಪಿ ರೈಲು ನಿಲ್ದಾಣಕ್ಕೆ ಶ್ರೀಕೃಷ್ಣ ರೈಲು ನಿಲ್ದಾಣ ಎಂದು ಹೆಸರಿಸಲು ಪ್ರಯತ್ನ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕೊಂಕಣ ರೈಲ್ವೆ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಝಾ, ಕಾರವಾರ ವಲಯ ರೈಲ್ವೆ ವ್ಯವಸ್ಥಾಪಕಿ ಆಶಾ ಶೆಟ್ಟಿ ಭಾಗವಹಿಸಿದ್ದರು.

ಉಡುಪಿ ರೈಲು ನಿಲ್ದಾಣದಲ್ಲಿ ₹ 2.40 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ
ಕೋಟ ಶ್ರೀನಿವಾಸ ಪೂಜಾರಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.