ADVERTISEMENT

‘ಅತಿವೃಷ್ಟಿ ಪರಿಹಾರಕ್ಕೆ ₹8 ಸಾವಿರ ಕೋಟಿ’

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ ಸಭೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 5:27 IST
Last Updated 1 ನವೆಂಬರ್ 2025, 5:27 IST
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಾತನಾಡಿದರು
ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಮಾತನಾಡಿದರು   

ಉಡುಪಿ: ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ಸಿದ್ಧತೆ ನಡೆಸಿದ್ದು, ಅದಕ್ಕಾಗಿ ರಾಜ್ಯ ಸರ್ಕಾರ ₹8 ಸಾವಿರ ಕೋಟಿ ಅನುದಾನ ನೀಡುತ್ತಿದೆ‌. ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ರೈತರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.

ವಾರಾಹಿ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಈವರೆಗೂ ರೈತರಿಗೆ ಸರ್ಕಾರದಿಂದ ಪರಿಹಾರ ನೀಡಿಲ್ಲ, ಈ ಕುರಿತು ಸರ್ಕಾರದಿಂದ ಹಣ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು. ಈ ಯೋಜನೆಯಲ್ಲಿ ಕೆಲವು ಜಮೀನುಗಳು ಡೀಮ್ಡ್ ಫಾರೆಸ್ಟ್ ಹಾಗೂ ಮೀಸಲು ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತಿರುವ ಕಾರಣ ಅರಣ್ಯ ಇಲಾಖೆಯ ಅನುಮತಿ ನೀಡುವಂತೆ ಸಚಿವೆ ಸೂಚಿಸಿದರು.

ADVERTISEMENT

ಪ್ರಧಾನಮಂತ್ರಿ ಸಿಂಚಾಯಿ ಯೋಜನೆಯಡಿ ಸಣ್ಣ ಪ್ರಮಾಣದ ಚೆಕ್ ಡ್ಯಾಮ್‌ಗಳ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದ್ದು, ಈ ಚೆಕ್ ಡ್ಯಾಮ್‌ಗಳಲ್ಲಿ ನೀರು ನಿಲ್ಲದ ಸ್ಥಿತಿಯಿದೆ. ಅನುದಾನದ ಬಳಕೆಯೂ‌ ಪೂರ್ಣ ಪ್ರಮಾಣದಲ್ಲಿ ಆಗಿಲ್ಲಎಂಬ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಜಿ.ಪಂ‌. ಸಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು

ಬಂದರು ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇಲೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಕೆಲವು ನಿರ್ಮಾಣ ಕಾರ್ಯಗಳಿಗೆ ಸಿಆರ್‌ಜಡ್‌ ಅನುಮತಿಯ ಅಗತ್ಯವಿದೆ. ಅದನ್ನು ಪಡೆಯಲು ಅನುಕೂಲ ಆಗುವಂತೆ ರಾಜ್ಯ ಮಟ್ಟದ ಸಿಆರ್‌ಜಡ್‌ ಸಮಿತಿ ರಚಿಸಬೇಕಿದ್ದು, ಈಗಾಗಲೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ. ಸಮಿತಿಯನ್ನು ತ್ವರಿತವಾಗಿ ರಚಿಸುವಂತೆ ನೋಡಿಕೊಳ್ಳಬೇಕು ಎಂದರು.

ಸಾರ್ವಜನಿಕರು ವಾಸದ ಮನೆ ಅಥವಾ ಕಟ್ಟಡ ಕಟ್ಟಲು ಬೇಡಿಕೆ ಇರುವ ಕೆಂಪು ಕಲ್ಲು ಗಣಿಗಾರಿಕೆಗೆ ಪಟ್ಟಾ ಲ್ಯಾಂಡ್ ನಲ್ಲಿ 3ಎ ನಲ್ಲಿ ಅನುಮತಿ ನೀಡಿದರೂ‌ ಅರಣ್ಯ ಇಲಾಖೆಯಿಂದ ಆಕ್ಷೇಪಣೆ ಮಾಡುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಕ್ರಮ ವಹಿಸಬೇಕು ಎಂದ ಸಚಿವರು, ಅದಕ್ಕಾಗಿ ಮೂರು ದಿನಗಳ ಗಡುವು ನೀಡಿದರು.

ಶಾಸಕರಾದ ಸುನಿಲ್ ಕುಮಾರ್, ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ,‌ ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ್ ಸರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ‌ಟಿ.ಕೆ. ಸ್ವರೂಪಾ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

‘ಕಾಮಗಾರಿ ಶೀಘ್ರ ಪೂರ್ಣಗೊಳಿಸಿ’

ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಒದಗಿಸುವ ಜಲ್‌ಜೀವನ್ ಮಿಷನ್ ಯೋಜನೆಯಡಿ ₹540.76 ಕೋಟಿ ಮೊತ್ತದಲ್ಲಿ 487 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 1.80 ಲಕ್ಷ ನಲ್ಲಿ ಸಂಪರ್ಕ ಕಲ್ಪಿಸಬೇಕಾಗಿತ್ತು. ಆದರೆ 1.49 ಲಕ್ಷ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. ಬಾಕಿ ಉಳಿದ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಪ್ರತಿ ನಲ್ಲಿಯಲ್ಲಿಯೂ ಸಮರ್ಪಕವಾಗಿ ನೀರು ಸರಬರಾಜು ಆಗುವಂತೆ ನೋಡಿಕೊಳ್ಳಬೇಕು ಎಂದು ಲಕ್ಷ್ಮಿ ಹೆಬ್ಬಾಳಕರ್‌ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.