ADVERTISEMENT

ಬಲಿಷ್ಠ ಸಮೃದ್ಧ ಉಡುಪಿ ನಿರ್ಮಾಣ

25 ವರ್ಷಗಳ ಅಭಿವೃದ್ಧಿ ದಿಕ್ಸೂಚಿ ತಯಾರಿಕೆ: ಸಚಿವ ವಿ.ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 13:47 IST
Last Updated 3 ಡಿಸೆಂಬರ್ 2022, 13:47 IST
ಉಡುಪಿ ರಜತೋತ್ಸವ ಲೋಗೋ
ಉಡುಪಿ ರಜತೋತ್ಸವ ಲೋಗೋ   

ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳು ಕಳೆದಿದ್ದು ಮುಂದಿನ 25 ವರ್ಷಗಳಲ್ಲಿ ಜಿಲ್ಲೆ ಸಮಗ್ರವಾಗಿ ಅಭಿವೃದ್ಧಿಪಡಿಸುವ ಬಗ್ಗೆ ದಿಕ್ಸೂಚಿ ರಚಿಸಿ ಅನುಷ್ಠಾನಗೊಳಿಸಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.

ಪುರಭವನದಲ್ಲಿ ಶನಿವಾರ ಜಿಲ್ಲಾಡಳಿತದ ವತಿಯಿಂದ ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ‘ದಿಕ್ಸೂಚಿ’ ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ವಿಷಯ ಕುರಿತಾಗಿ ಎರಡು ದಿನಗಳ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಜಿಲ್ಲೆ ರಾಜ್ಯದ ಇತರೆ ಜಿಲ್ಲೆಗಳಿಗಿಂತ ವಿಭಿನ್ನವಾಗಿದ್ದು ಅಭಿವೃದ್ಧಿಯ ಪಥದಲ್ಲಿದೆ. ಮುಂದಿನ 25 ವರ್ಷಗಳಲ್ಲಿ ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ, ಕೃಷಿ, ಕೈಗಾರಿಕೆ, ಮೀನುಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮತ್ತಷ್ಟು ಪ್ರಗತಿ ಸಾಧಿಸಬೇಕಿದ್ದು, ಹಿರಿಯ ಅಧಿಕಾರಿಗಳು, ತಜ್ಞರು, ಸಾರ್ವಜನಿಕರೊಂದಿಗೆ ಚರ್ಚೆಗಳನ್ನು ನಡೆಸಿ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಅನುಷ್ಠಾನಗೊಳಿಸಬೇಕು. ಪ್ರಧಾನ ಮಂತ್ರಿ ಅವರ ನವ ಭಾರತ ಕಲ್ಪನೆಯಂತೆ, ನವ ಕರ್ನಾಟಕ ಸಂಕಲ್ಪದೊಂದಿಗೆ, ಉಡುಪಿ ಜಿಲ್ಲೆ ಸರ್ವತೋಮುಖ ಪ್ರಗತಿ ಸಾಧಿಸಬೇಕು ಎಂದರು.

ADVERTISEMENT

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಭವಿಷ್ಯದ ಪ್ರಗತಿಯ ದೃಷ್ಟಿಯಿಂದ ಉಡುಪಿ ಜಿಲ್ಲೆಗೆ ಒಂದು ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯವಿದೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ 25 ಎಕರೆ ಜಾಗವನ್ನು ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣಕ್ಕೆ ಮೀಸಲಿಡಬೇಕು. ಯುವ ಜನತೆಗೆ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಿರುವ ತರಬೇತಿ ಹಾಗೂ ಸಂವಹನ ಕೌಶಲಗಳ ಬಗ್ಗೆ ತರಬೇತಿ ನೀಡಬೇಕು ಎಂದರು.

ಶಾಸಕ ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು ಸದ್ಬಳಕೆ ಆಗಬೇಕು. ಕೃಷಿ, ಪ್ರವಾಸೋದ್ಯಮ ಮತ್ತು ಮೀನುಗಾರಿಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಮುಂದಿನ 25 ವರ್ಷಗಳಲ್ಲಿ ಜಿಲ್ಲೆಯನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ, ಎಸ್‌ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಜಿಲ್ಲೆಯ ಮೊದಲ ಜಿಲ್ಲಾಧಿಕಾರಿ ಕಲ್ಪನಾ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸ್ವಾಗತಿಸಿದರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.