ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮಾಹೆಯ ಕುಲಾಧಿಪತಿ ಡಾ. ರಾಮದಾಸ್ ಎಂ. ಪೈ ಅವರ 90ನೇ ಹುಟ್ಟುಹಬ್ಬವನ್ನು ಬುಧವಾರ ವಿವಿಧ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.
‘ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ಪರಿವರ್ತನೆಯ ಮುಂದಾಳತ್ವ’ ಎಂಬ ವಿಷಯದ ಕುರಿತು ಸ್ವಯಂಸೇವಕ ಸೇವಾ ಸಂಸ್ಥೆ (ವಿಎಸ್‌ಒ) ವತಿಯಿಂದ 6ನೇ ರಾಷ್ಟ್ರೀಯ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ಸುಮಾರು 700 ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಲಿಯೋಬೆನ್ ವಿಶ್ವವಿದ್ಯಾಲಯದ (ಆಸ್ಟ್ರಿಯಾ) ಪೀಟರ್ ಮೋಸರ್ ಮತ್ತು ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದ (ಕೆನಡಾ) ಜಾನ್ ಗಿಲ್ಬರ್ಟ್ ಭಾಗವಹಿಸಿದ್ದರು.
ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ಸುಮಾರು 2000 ಮಂದಿ ಭಾಗವಹಿಸಿದ್ದರು. ರಕ್ತದಾನ ಮತ್ತು ಅಂಗಾಂಗ ದಾನ ಪ್ರತಿಜ್ಞೆಯ ಅಭಿಯಾನ ನಡೆದಿದ್ದು, 200 ಮಂದಿ ರಕ್ತದಾನ ಮಾಡಿದ್ದಾರೆ.
ಮಣಿಪಾಲದ ಕಸ್ತೂರಬಾ ಆಸ್ಪತ್ರೆ, ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ, ಉಡುಪಿ ಮತ್ತು ಮಂಗಳೂರು ಜಿಲ್ಲೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಮಂಗಳೂರಿನ ಕಸ್ತೂರಬಾ ಆಸ್ಪತ್ರೆ, ಕೆಎಂಸಿ ಅತ್ತಾವರ ಮತ್ತು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರಿನ ಲೇಡಿ ಗೋಷೆನ್ ಆಸ್ಪತ್ರೆ ಸೇರಿದಂತೆ ಕಸ್ತೂರಬಾ ವೈದ್ಯಕೀಯ ಕಾಲೇಜು ಆಡಳಿತದ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 20,000 ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸುಮಾರು 1000 ಯಕ್ಷಗಾನ ಕಲಾವಿದರಿಗೆ ಮತ್ತು ಕುಟುಂಬದವರಿಗೆ ಮಣಿಪಾಲ ಆರೋಗ್ಯ ಕಾರ್ಡ್ ಅನ್ನು ನೀಡಲಾಯಿತು.
ಸಮ್ಮೇಳನದಲ್ಲಿ ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ. ಡಿ. ವೆಂಕಟೇಶ್, ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.