ADVERTISEMENT

ಅತ್ಯಾಚಾರ ಪ್ರಕರಣ: ಆರೋಪಿಗೆ 27 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 15:19 IST
Last Updated 12 ಏಪ್ರಿಲ್ 2019, 15:19 IST
   

ಉಡುಪಿ: ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬುದ್ಧಿಮಾಂದ್ಯ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ ಜಿಲ್ಲಾ ವಿಶೇಷ ನ್ಯಾಯಾಲಯ ಹಲವು ಪ್ರಕರಣಗಳಡಿ ಒಟ್ಟು 27 ವರ್ಷ ಶಿಕ್ಷೆ ವಿಧಿಸಿದೆ.

ಮಣಿಪಾಲ ಪೆರಂಪಳ್ಳಿಯ ಅರುಣ್‌ ಆಚಾರಿ (32) ಶಿಕ್ಷೆಗೆ ಗುರಿಯಾದ ವ್ಯಕ್ತಿ. ಬಾಲಕಿಯ ಅಪಹರಣ ಪ್ರಕರಣದಲ್ಲಿ 7 ವರ್ಷ ಜೈಲು, ₹ 30000 ದಂಡ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 10 ವರ್ಷ ಸಜೆ ₹ 30,000 ದಂಡ, ಪೋಕ್ಸೋ ಕಾಯ್ದೆಯಡಿ 10 ವರ್ಷ ಜೈಲು ಶಿಕ್ಷೆ ₹ 50000 ದಂಡ ವಿಧಿಸಲಾಗಿದೆ. ದಂಡದ ಹಣದಲ್ಲಿ ಸಂತ್ರಸ್ತೆಗೆ ₹ 1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.

ಅಪಹರಣ ಪ್ರಕರಣದ ಶಿಕ್ಷೆ ಹೊರತುಪಡಿಸಿ ಉಳಿದ ಪ್ರಕರಣಗಳಲ್ಲಿ ವಿಧಿಸಲಾಗಿರುವ ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸುವಂತೆ ನ್ಯಾಯಾಲಯ ತೀರ್ಪು ನೀಡಿದೆ.

ADVERTISEMENT

ಪ್ರಕರಣದ ವಿವರ:

2016ರ ಜುಲೈ 16ರಂದು ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ಆರೋಪಿ ಅರುಣ್ ಪೂಜಾರಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಬಾಲಕಿಯ ತಂದೆ ಮಣಿಪಾಲ ಠಾಣೆಗೆ ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ ಜಿಲ್ಲಾ ವಿಶೇಷ ನ್ಯಾಯಾಲಯ ಬುಧವಾರ ಆರೋಪಿಯನ್ನು ದೋಷಿ ಎಂದು ನಿರ್ಧರಿಸಿತ್ತು.ಸರ್ಕಾರದ ಪರವಾಗಿ ಜಿಲ್ಲಾ ವಿಶೇಷ ಸರ್ಕಾರಿ ಅಭಿಯೋಜಕ ವಿಜಯವಾಸು ಪೂಜಾರಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.