
ಉಡುಪಿ: ಇದೇ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚನೆ ನೀಡಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8.30ರಿಂದ 8.50ರವರೆಗೆ ದೇಶ ಭಕ್ತಿಗೀತೆ ಕಾರ್ಯಕ್ರಮ, ಬಳಿಕ ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ನಡೆಯಲಿದೆ. 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ, ಗಣರಾಜ್ಯೋತ್ಸವ ಸಂದೇಶ ನೀಡುವರು. ಶಾಲಾ– ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಪೊಲೀಸ್, ಅರಣ್ಯ, ಗೃಹರಕ್ಷಕ, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.