ADVERTISEMENT

ಶಾಲಾ ವಾಹನಗಳ ವೇಗ ಮಿತಿ 40 ಕಿ.ಮೀ ಮೀರುವಂತಿಲ್ಲ: ಜೆ.ಪಿ.ಗಂಗಾಧರ್‌

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 16:18 IST
Last Updated 25 ನವೆಂಬರ್ 2021, 16:18 IST
ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ ಮಾತನಾಡಿದರು.
ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ ಮಾತನಾಡಿದರು.   

ಉಡುಪಿ: ವಾಹನ ಚಾಲಕರು ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಚಾಲನಾ ಪರವಾನಗಿ ಹಾಗೂ ರಸ್ತೆ ಸುರಕ್ಷತಾ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು ಎಂದು ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ. ಗಂಗಾಧರ ಹೇಳಿದರು.

ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಚೆಗೆ ಪದವಿ ಪೂರ್ವ ಕಾಲೇಜಿನ 62 ಉಪನ್ಯಾಸಕರಿಗೆ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳನ್ನು ಕರೆದೊಯ್ಯುವ ಶಾಲಾ ವಾಹನಗಳ ವೇಗ ಮಿತಿ 40 ಕಿ.ಮೀ ಮೀರುವಂತಿಲ್ಲ. ಮಕ್ಕಳನ್ನು ಜಾಗೃತೆಯಿಂದ ನೋಡಿಕೊಳ್ಳುವ ಜವಾಬ್ದಾರಿ ಶಾಲಾ ವಾಹನದ ಚಾಲಕ ಹಾಗೂ ವಾಹನದಲ್ಲಿ ಇರುವ ಸಹಾಯಕರ ಕರ್ತವ್ಯ. ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಕೂಡ ಮಕ್ಕಳಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

18 ವರ್ಷದೊಳಗಿನವರಿಗೆ ವಾಹನ ಚಲಾಯಿಸದಂತೆ ಪೋಷಕರು ತಿಳಿಸಬೇಕು. ಮಕ್ಕಳಿಗೆ ವಾಹನ ಚಾಲನೆ ಮಾಡಲು ಕೊಡಬಾರದು. ಸಾರ್ವಜನಿಕರು ವಾಹನ ಓಡಿಸುವಾಗ ಡಿಎಲ್‌, ವಾಹನ ವಿಮೆ, ವಾಯು ಮಾಲಿನ್ಯ ನಿಯಂತ್ರಣ ಪತ್ರ, ನೋಂದಣಿ ಪತ್ರ ಕಡ್ಡಾಯವಾಗಿ ಜತೆಗಿಟ್ಟುಕೊಳ್ಳಬೇಕು. ರಸ್ತೆ ನಿಯಮಗಳ ಬಗ್ಗೆ ತಿಳಿದುಕೊಂಡಿರಬೇಕು ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಾರುತಿ ಮಾತನಾಡಿ, ಉಪನ್ಯಾಸಕರು ಪಾಠದ ಜೊತೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಮೋಟಾರು ವಾಹನ ನಿರೀಕ್ಷಕ ವಿಶ್ವನಾಥ್ ನಾಯಕ್ ಹಾಗೂ ಪದವಿ ಪೂರ್ವ ಶಿಕ್ಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.