ADVERTISEMENT

ಪಂಚಾಯಿತಿಗಳಲ್ಲಿ ರಾಜಕಾರಣ ಸಲ್ಲ: ಸಚಿವೆ ಹೆಬ್ಬಾಳಕರ 

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 7:39 IST
Last Updated 17 ಆಗಸ್ಟ್ 2025, 7:39 IST
ಮಜೂರು ಗ್ರಾಮ ಪಂಚಾಯತ್‌ನ ನವೀಕೃತ ಸಭಾ ಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು,. 
ಮಜೂರು ಗ್ರಾಮ ಪಂಚಾಯತ್‌ನ ನವೀಕೃತ ಸಭಾ ಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಶುಕ್ರವಾರ ನಡೆಯಿತು,.    

ಕಾಪು (ಪಡುಬಿದ್ರಿ): ‘ಭಾರತ ಹಳ್ಳಿಗಳ ದೇಶ. ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಗ್ರಾಮಗಳ ವಿಕಾಸವೇ ರಾಜೀವ್ ಗಾಂಧಿ ಅವರ ಕನಸಾಗಿತ್ತು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ವತಿಯಿಂದ ಶುಕ್ರವಾರ ನಡೆದ ಮಜೂರು ಗ್ರಾಮ ಪಂಚಾಯಿತಿಯ ನವೀಕೃತ ಸಭಾಭವನ ಉದ್ಘಾಟನೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಮಾಡಬಾರದು. ಅದಕ್ಕಾಗಿಯೇ ಗ್ರಾ.ಪಂ. ಚುನಾವಣೆಗಳಲ್ಲಿ ಪಕ್ಷಗಳ ಚಿಹ್ನೆ ಇರುವುದಿಲ್ಲ ಎಂದರು.

ಸಮುದಾಯದ ಸೇವೆ ಸಲ್ಲಿಸಲು ಪಂಚಾಯಿತಿ ಸದಸ್ಯರು, ಅಧಿಕಾರಿಗಳ ಹೊಣೆಗಾರಿಕೆ ಮುಖ್ಯ. ಅದು ಪರಿಣಾಮಕಾರಿ ಆಡಳಿತ, ಸಮುದಾಯದ ಸಹಭಾಗಿತ್ವ, ಸುಸ್ಥಿರ ಅಭಿವೃದ್ಧಿಗೆ ಅನುಕೂಲವಾಗಲಿದೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರು ವಿಕೇಂದ್ರೀಕರಣ ವ್ಯವಸ್ಥೆ ಜಾರಿಗೆ ತಂದರು.
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಅಧಿಕಾರಾವಧಿಯಲ್ಲಿಯೂ ಪಂಚಾಯಿತಿ ವ್ಯವಸ್ಥೆಗೆ ಬಲ ತುಂಬಲಾಯಿತು. ನರೇಗಾ ಯೋಜನೆ ಬಂದ ನಂತರ ಗ್ರಾ.ಪಂ.ಗಳ ಬಲವರ್ಧನೆಯಾಗಿದೆ. ಬೀದಿ ದೀಪಗಳ ಬಿಲ್ ತುಂಬುವ ಶಕ್ತಿಯೂ ಇಲ್ಲದ ಪಂಚಾಯಿತಿಗಳು ಇಂದು ಸಾಕಷ್ಟು ಅನುದಾನ ಪಡೆಯುತ್ತಿವೆ ಎಂದರು.

ADVERTISEMENT

ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಪಾತ್ರ ಮಹತ್ವದ್ದು. ಈ ಹಿಂದೆ ಗ್ರಾ.ಪಂ. ಕಚೇರಿಗೆ ಕೆಲಸ ಅರಸಿ ಬರುವವರ ಸಂಖ್ಯೆ ತುಂಬಾ ಕಡಿಮೆಯಾಗಿತ್ತು. ಆದರೆ ಇಂದು ಪಂಚಾಯಿತಿ ಕಾರ್ಯಾಲಯದಿಂದಲೇ ಕೋಟ್ಯಾಂತರ ರೂಪಾಯಿಗಳ ಕಾಮಗಾರಿಗಳು ನಡೆಯುತ್ತಿವೆ ಎಂದು ಸಚಿವೆ ಹೇಳಿದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಮುಖಂಡ ವಿನಯ ಕುಮಾರ್ ಸೊರಕೆ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ರಶ್ಮಿ, ತಹಶೀಲ್ದಾರ್ ಡಾ.ಪ್ರತಿಭಾ, ತಾಲ್ಲೂಕು ಪಂಚಾಯಿತಿ ಸಿಇಒ ಜೇಮ್ಸ್‌ ಡಿಸಿಲ್ವ, ಗ್ರಾ.ಪಂ. ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.