ADVERTISEMENT

ಸಂವಿಧಾನ ಗೌರವ ಅಭಿಯಾನ ನ.26ರಿಂದ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 13:59 IST
Last Updated 24 ನವೆಂಬರ್ 2021, 13:59 IST

ಉಡುಪಿ: ಬಿಜೆಪಿ ಎಸ್‌ಸಿ ಮೋರ್ಚಾದಿಂದ ನ.26ರಿಂದ ಡಿ.6ವರೆಗೆ ಸಂವಿಧಾನ ಗೌರವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.26ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 500 ಮಂದಿ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ಸಂವಿಧಾನಕ್ಕೆ ಗೌರವ ಸಲ್ಲಿಸಲಾಗುವುದು. ಕಾರ್ಯಕ್ರಮದಲ್ಲಿ 5 ಮಂಡಲಗಳ ದಲಿತ ಸಮುದಾಯಕ್ಕೆ ಸೇರಿದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಾಗುವುದು ಎಂದರು.

30 ವರ್ಷಗಳಿಂದ ಕಂಬಳದ ಕೋಣಗಳನ್ನು ಪೋಷಿಸಿಕೊಂಡು ಬಂದಿರುವ ಗುರುವ ಕೊರಂಗ್ರಪಾಡಿ ಹಾಗೂ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಅವರನ್ನು ಸನ್ಮಾನಿಸಲಾಗುವುದು ಎಂದರು.

ADVERTISEMENT

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಈಚೆಗೆ ದಲಿತರು ಹೊಟ್ಟೆಪಾಡಿಗೆ ಬಿಜೆಪಿ ಸೇರುತ್ತಿದ್ದಾರೆ ಎಂಬ ಹೇಳಿಕೆ ನೀಡಿರುವುದು ಖಂಡನೀಯ. ರಾಷ್ಟ್ರದ ಹಿತ ಚಿಂತನೆಗಾಗಿ, ರಾಷ್ಟ್ರ ರಕ್ಷಣೆಗಾಗಿ ದಲಿತರು ಬಿಜೆಪಿ ಸೇರಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಶೋಷಿತರ ಪರ ಹಲವು ಯೋಜನೆಗಳನ್ನು ಜಾರಿಗೆ ತಂದು ಅಂಬೇಡ್ಕರ್‌ಗೆ ಗೌರವ ನೀಡಿದೆ ಎಂದರು.

ಹಂಸಲೇಖ ಪೇಜಾವರ ಶ್ರೀಗಳ ಕುರಿತು ನೀಡಿರುವ ಹೇಳಿಕೆಯನ್ನು ಎಸ್‌ಸಿ ಮೋರ್ಚಾ ಖಂಡಿಸುತ್ತದೆ. ಪೇಜಾವರ ಶ್ರೀಗಳು ತಮ್ಮ ಜೀವಿತಾವಧಿಯಲ್ಲಿ ದಲಿತರ ಕೇರಿಗಳಿಗೆ ಭೇಟಿನೀಡಿ ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ್ದರು. ಎಲ್ಲ ಸಂತರಿಗೂ ಮಾದರಿಯಾಗಿದ್ದರು ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲ ಕಳಂಜೆ, ಪ್ರಧಾನ ಕಾರ್ಯದರ್ಶಿ ಸದಾನಂದ ಕಾಪು, ಬೈಂದೂರು ಮಂಡಲ ಅಧ್ಯಕ್ಷ ಚಂದ್ರ ಪಂಚವಟಿ, ಮುಖಂಡರಾದ ಸೋಮನಾಥ್, ರಾಜೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.