ADVERTISEMENT

ಯಾವ ಮನೆಯೂ ಸಮೀಕ್ಷೆಯಿಂದ ಹೊರಗುಳಿಯಬಾರದು: ತಹಶಿಲ್ದಾರ್

ನಾಳೆಯಿಂದ 17ರವರೆಗೆ ಒಳಮೀಸಲಾತಿ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 3 ಮೇ 2025, 14:09 IST
Last Updated 3 ಮೇ 2025, 14:09 IST
ಕಾಪು ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಮೀಕ್ಷೆದಾರರ ತರಬೇತಿ ಕಾರ್ಯಾಗಾರವನ್ನು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಉದ್ಘಾಟಿಸಿ ಮಾತನಾಡಿದರು
ಕಾಪು ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಮೀಕ್ಷೆದಾರರ ತರಬೇತಿ ಕಾರ್ಯಾಗಾರವನ್ನು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಉದ್ಘಾಟಿಸಿ ಮಾತನಾಡಿದರು   

ಕಾಪು (ಪಡುಬಿದ್ರಿ): ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯ, ಸ್ಥಿತಿಗತಿಗಳಿಗಾಗಿ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯು ಅಗತ್ಯವಾಗಿದೆ. ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಯಾವುದೇ ಕುಟುಂಬ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಹೇಳಿದರು.

ಕಾಪು ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ಸಮೀಕ್ಷೆದಾರರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾ.ಎಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತು ಕ್ರಮವಹಿಸಲು ಸರ್ಕಾರದಿಂದ ನಡೆಸಲಾಗುತ್ತಿರುವ ಸಮೀಕ್ಷೆ ಇದಾಗಿದೆ ಎಂದರು.

ADVERTISEMENT

‌ಆನ್‌ಲೈನ್‌ ಆ್ಯಪ್‌ ಮೂಲಕ ಮಾಹಿತಿ ಸಂಗ್ರಹ: ಈ ಸಮೀಕ್ಷೆಯಲ್ಲಿ ಆನ್‌ಲೈನ್ ಆ್ಯಪ್‌ ಮೂಲಕ ಮೊಬೈಲ್‌ನಲ್ಲಿ ಮಾಹಿತಿ ದಾಖಲಿಸಲಾಗುತ್ತದೆ. ಮಾಹಿತಿದಾರರು ತಮ್ಮ ರೇಷನ್ ಕಾರ್ಡ್ ಆಥವಾ ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಯು 3 ಹಂತಗಳಲ್ಲಿ ನಡೆಯಲಿದೆ. ಗ್ರಾಮ ಮಟ್ಟದ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮತಗಟ್ಟೆವಾರು ಪ್ರತಿ ಮನೆಗೆ ತೆರಳಿ, ಎಚ್ಚರಿಕೆಯಿಂದ ಸಮೀಕ್ಷೆ ನಡೆಸಬೇಕು ಎಂದರು.

ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ನೀಡಬಾರದು. ಮನೆ-ಮನೆಗೆ ಭೇಟಿ ನೀಡಿದಾಗ ಅಲ್ಲಿನ ಕುಟುಂಬ ಸದಸ್ಯರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಮಾಹಿತಿಯನ್ನು ಮನೆಯ ಮುಖ್ಯಸ್ಥರಿಂದ ಪಡೆದುಕೊಂಡು ಸಮೀಕ್ಷೆಯ ಪ್ರಶ್ನೆಗಳಿಗೆ ಕುಟುಂಬದ ಸದಸ್ಯರು ನೀಡಿದ ಮಾಹಿತಿಯನ್ನು ಮಾತ್ರ ಭರ್ತಿ ಮಾಡಬೇಕು. ಸಮೀಕ್ಷೆಯಲ್ಲಿ ಯಾವುದೇ ಮಧ್ಯವರ್ತಿ, ಸಂಘ-ಸಂಸ್ಥೆಗಳು ಮತ್ತು ಮಕ್ಕಳಿಂದ ಮಾಹಿತಿ ಭರ್ತಿ ಮಾಡುವಂತಿಲ್ಲ. ಸಮೀಕ್ಷೆಯಲ್ಲಿನ ಎಲ್ಲ ಪ್ರಶ್ನೆಗಳನ್ನು ಅರ್ಥೈಸಿಕೊಂಡು ಸರಿಯಾದ ಮಾಹಿತಿ ಸಂಗ್ರಹಿಸಿ ಮೊಬೈಲ್ ಆ್ಯಪ್‌ ಮೂಲಕವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ತಹಶಿಲ್ದಾರ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ತರಬೇತಿ ಕಾರ್ಯಾಗಾರಕ್ಕೆ ಭೇಟಿ ನೀಡಿದರು. 

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ನಾರಾಯಣಸ್ವಾಮಿ, ಬಸವರಾಜು, ವಿನಾಯಕ, ಉಪ ತಹಶೀಲ್ದಾರ್‌ಗಳಾದ ಅಶೋಕ್, ದೇವಕಿ, ಮಾಸ್ಟರ್ ಟ್ರೈನರ್‌ ಮಧುರಾಜ್, ಎಡ್ವರ್ಡ್, ನವ್ಯ, ರಾಘವೇಂದ್ರ, ಪುಷ್ಪಲತಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.