ADVERTISEMENT

ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಅಗತ್ಯ ವ್ಯವಸ್ಥೆಗಳು ಇರಲಿ

ಕೋವಿಡ್ ನಿರ್ವಹಣೆ, ತೌತೆ ಚಂಡಮಾರುತದ ಹಾನಿಯ ಅವಲೋಕನ ನಡಸಿದ ಸಂಸದೆ ಶೋಭಾ ಕರಂದ್ಲಾಜೆ

​ಪ್ರಜಾವಾಣಿ ವಾರ್ತೆ
Published 17 ಮೇ 2021, 16:04 IST
Last Updated 17 ಮೇ 2021, 16:04 IST
ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.   

ಉಡುಪಿ: ಆಸ್ಪತ್ರೆಗಳಿಗೆ ದಾಖಲಾಗುವ ಕೋವಿಡ್ ಸೋಂಕಿತರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಕೋವಿಡ್ ನಿರ್ವಹಣಾ ತಂಡಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗಿದ್ದು, ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.

ಸೋಂಕಿತರಿಗೆ ಬೆಡ್‌ಗಳ ಹಂಚಿಕೆ, ಆಮ್ಲಜನಕ ಪೂರೈಕೆ, ರೆಮಿಡಿಸಿವರ್ ಸರಬರಾಜು, ಕೋವಿಡ್‌ ಲಸಿಕೆಯ ಲಭ್ಯತೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಂಸದರು, ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದ ಕೋವಿಡ್ ಕಾರ್ಯಪಡೆಯು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಸಂಪರ್ಕಿಸಿ ಜಿಲ್ಲೆಗೆ ಅಗತ್ಯವಿರುವ ಆಮ್ಲಜನಕ, ರೆಮಿಡಿಸಿವರ್ ಹಾಗೂ ಅಗತ್ಯ ಔಷಧಿಗಳು, ವೈದ್ಯಕೀಯ ಸಲಕರಣೆಗಳನ್ನು ಪೂರೈಸುವಂತೆ ತಿಳಿಸಿದರು.

ರಾಜ್ಯದ ಪರಿಸ್ಥಿತಿ ಅವಲೋಕಿಸಿದಾಗ ಕೋವಿಡ್ ಎರಡನೇ ಅಲೆ ಕಡಿಮೆಯಾಗುತ್ತಿದ್ದು, ಜಿಲ್ಲೆಯ ಜನರು ಒತ್ತಡ ಹಾಗ ಆತಂಕಕ್ಕೆ ಒಳಗಾಗಬಾರದು ಎಂದು ವಿನಂತಿಸಿದರು.

ತೌತೆ ಚಂಡಮಾರುತದ ಪರಿಣಾಮಗಳು ಕುರಿತು ಮಾಹಿತಿ ಪಡೆದ ಬಳಿಕ ಮಾತನಾಡಿ, ಅಗತ್ಯವಿರುವ ತೀರ ಪ್ರದೇಶಗಳ ನಿವಾಸಿಗಳನ್ನು ಮುಂಚಿತವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಸೂಚಿಸಿದರು.

ಸಭೆಯಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಡಾ.ವೈ.ನವೀನ್ ಭಟ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಎ.ಶ್ರೀನಿವಾಸ ರಾವ್ ಇದ್ದರು.

ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್, ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್‌ಪಿ ವಿಷ್ಣುವರ್ಧನ್‌, ಉಪವಿಭಾಗಾಧಿಕಾರಿ ರಾಜು, ಡಿಎಚ್‌ಒ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಜಿಲ್ಲಾ ಕೋವಿಡ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಲಸಿಕಾಧಿಕಾರಿ ಡಾ.ರಾಮ ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.