ಉಡುಪಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಆರ್‌ಸಿಬಿ ಗೆಲುವಿಗೆ ಸಂಭ್ರಮಾಚರಣೆ ಮಾಡಿದರೆ ತಮಗೆ ಮತ ಸಿಗಬಹುದೆಂಬ ದುರಾಲೋಚನೆಯಿಂದ ಕಾಂಗ್ರೆಸ್ ಸರ್ಕಾರವು ಕಾರ್ಯಕ್ರಮ ನಡೆಸಿತ್ತು ಎಂದು ಹೇಳಿದರು.
ಈ ದುರ್ಘಟನೆಯ ಹೊಣೆ ಹೊತ್ತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.
ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರ್ಘಟನೆಯು ರಾಜ್ಯ ಸರ್ಕಾರದ ತಪ್ಪು ಹೆಜ್ಜೆಗೆ ಉದಾಹರಣೆ. ಕಾಲ್ತುಳಿತದಲ್ಲಿ ಜನರು ಮೃತಪಟ್ಟ ಬಳಿಕವೂ ಸಂಭ್ರಮಾಚರಣೆ ನಿಂತಿರಲಿಲ್ಲ ಎಂದರು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಮೊದಲಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.