ಉಡುಪಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಒಳಗೆ ಮತ್ತು ಹೊರಗೆ ಭಾರತದ ಘನತೆ, ಸಾರ್ವಭೌಮತ್ವಕ್ಕೆ ಕುಂದು ತರುವಂತೆ ನಡೆದುಕೊಳ್ಳುವ ಮೂಲಕ ದೇಶದ ಮಾನ ಕಳೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ ಆರೋಪಿಸಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಕ್ತ ಸಮಯ ನೋಡಿಕೊಂಡು ಭಾರತದಲ್ಲಿ ಮೀಸಲಾತಿಯನ್ನು ರದ್ದು ಮಾಡುತ್ತೇವೆ ಎಂದು ರಾಹುಲ್ ಅವರು ಹೇಳಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದೇ ರಾಹುಲ್ ಅವರು ಹೇಳಿರುವ ಸೂಕ್ತ ಸಮಯ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದರು.
ರಾಹುಲ್ ಅವರ ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿಯು ದೇಶದಾದ್ಯಂತ ಪ್ರತಿಭಟನೆ ನಡೆಸಿ ಜನಜಾಗೃತಿ ಮೂಡಿಸಲಿದೆ. ರಾಜ್ಯದಲ್ಲೂ ಪ್ರತಿಭಟನೆ, ಪತ್ರಿಕಾಗೋಷ್ಠಿಗಳ ಮೂಲಕ ಜನಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಸರ್ಕಾರದ ಗುಣಮಟ್ಟದಲ್ಲಿ ಕುಸಿತ ಆಗುತ್ತದೆ ಎಂದು ಹಿಂದೆ ನೆಹರೂ ಹೇಳಿದ್ದರು. ಈಗ ರಾಹುಲ್ ಅವರು ಕೂಡ ಅಂಥಹದ್ದೇ ಹೇಳಿಕೆ ನೀಡಿದ್ದಾರೆ ಎಂದು ಹರಿಪ್ರಕಾಶ್ ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಗೆ ಮೊದಲ ಬಾರಿ ಪಾರದರ್ಶಕವಾಗಿ ಚುನಾವಣೆ ನಡೆಯುತ್ತಿದೆ. ಅಲ್ಲಿಗೆ ವಿಶೇಷ ಸ್ಥಾನಮಾನ ನೀಡಲಾಗಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದರಿಂದ ಇದು ಸಾಧ್ಯವಾಗುತ್ತಿದೆ ಎಂದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಪ್ರತ್ಯೇಕತಾವಾದಿಗಳ ಜೊತೆಗೆ ಕೈಜೋಡಿಸಿದೆ ಎಂದು ಆರೋಪಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ, ರೇಷ್ಮಾ ಉದಯ ಶೆಟ್ಟಿ, ರಾಜೇಶ್ ಕಾವೇರಿ, ಶ್ರೀನಿಧಿ ಹೆಗ್ಡೆ, ಶಿವಕುಮಾರ್ ಅಂಬಲಪಾಡಿ ಇದ್ದರು.
‘ಗಲಭೆ ಆರೋಪಿಗಳನ್ನು ಶೀಘ್ರ ಬಂಧಿಸಿ’ ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಹರಿಪ್ರಕಾಶ್ ಕೋಣೆಮನೆ ಅವರು ಸರ್ಕಾರವನ್ನು ಒತ್ತಾಯಿಸಿದರು. ಘಟನೆಯನ್ನು ಖಂಡಿಸಿ ರಾಜ್ಯದಾದ್ಯಂತ ಗಣೇಶೋತ್ಸವ ಸಮಿತಿಗಳು ಪ್ರತಿಭಟನೆ ನಡೆಸಲಿವೆ. ಅದಕ್ಕೆ ಬಿಜೆಪಿಯು ಸಹಕಾರ ನೀಡಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಾಕಿಸ್ತಾನ ಧ್ವಜ ಹಾರಿಸಿರುವ ಪ್ರಕರಣ ನಡೆದಿದೆ. ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಲಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಲೇ ಇದೆ. ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಬಿಜೆಪಿಯ ಹೋರಾಟದಿಂದಾಗಿ ತತ್ತರಿಸಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.