ADVERTISEMENT

‘ವಿದ್ಯಾರ್ಥಿಗಳು ಮಾನಸಿಕ ಸ್ಥೈರ್ಯ ಹೆಚ್ಚಿಸಿಕೊಳ್ಳಿ’

ಮೀನು ಮಾರಾಟ ಫೆಡರೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 7:46 IST
Last Updated 1 ಫೆಬ್ರುವರಿ 2026, 7:46 IST
ಮನೋ ವೈದ್ಯ ಡಾ. ಪಿ. ವಿ. ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು
ಮನೋ ವೈದ್ಯ ಡಾ. ಪಿ. ವಿ. ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು   

ಉಡುಪಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಲು ಶೈಕ್ಷಣಿಕ ಸಾಧನೆಯ ಜೊತೆ ಜೊತೆಗೆ ಸವಾಲುಗಳನ್ನು ಎದುರಿಸಲು ಧನಾತ್ಮಕ ಚಿಂತನೆಯೊಂದಿಗೆ ಮಾನಸಿಕ ಸ್ಥೈರ್ಯವನ್ನೂ ಹೆಚ್ಚಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಮನೋ ವೈದ್ಯ ಡಾ. ಪಿ. ವಿ. ಭಂಡಾರಿ ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಉಡುಪಿ ಜಿಲ್ಲೆಯ 1,455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮಿ ಬ್ಯಾಂಕ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸುಮಾರು ₹1 ಕೋಟಿ ಮೊತ್ತದ ಪ್ರತಿಭಾ ಪುರಸ್ಕಾರವನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ಶಿಕ್ಷಣದ ಬಗ್ಗೆ ಸಾಮಾಜಿಕ ಬದ್ಧತೆ ಮೆರೆದಿದೆ ಎಂದರು.

ADVERTISEMENT

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ದಿನಗಳಿಂದಲೇ ಶಿಕ್ಷಣದೊಂದಿಗೆ ತಮ್ಮ ಅಭಿರುಚಿಯ ಚಟುವಟಿಕೆ, ಆಸಕ್ತಿಯ ವಿಷಯಗಳನ್ನು ಮೈಗೂಡಿಸಿಕೊಂಡು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಶಕ್ತಿಯಾಗಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಶಾಸಕ ಯಶ್‌ಪಾಶ್‌ ಸುವರ್ಣ ವಹಿಸಿದ್ದರು. 2025ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ ಸುವರ್ಣ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಕಂಚಿನ ಪದಕ ವಿಜೇತ ಕ್ರೀಡಾ ಸಾಧಕಿ ರಿಮ ರಾವ್ ಯು. ಬಿ. ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ. ಬಂಗೇರ, ನಗರಸಭೆ ಸದಸ್ಯ ಯೋಗೀಶ್ ಸಾಲ್ಯಾನ್ ಮಾತನಾಡಿದರು.

ಮತ್ಸ್ಯೋದ್ಯಮಿ ಆನಂದ ಪಿ. ಸುವರ್ಣ, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ರತ್ನಾಕರ ಸಾಲ್ಯಾನ್, ಆಳ ಸಮುದ್ರ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸುಭಾಷ್ ಮೆಂಡನ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕುಂದರ್, ಕೋಟ ಪರ್ಸೀನ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ರಾಜೇಂದ್ರ ಸುವರ್ಣ, ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷೆ ಗೀತಾ ಕರ್ಕೇರ, ಸುಂದರ ಕಲ್ಮಾಡಿ, ಎಡ್ಲಿನ್ ಕರ್ಕಡ, ದೇವಪ್ಪ ಕಾಂಚನ್, ದರ್ಶನ್ ಟಿ. ಕೆ., ಉಪಸ್ಥಿತರಿದ್ದರು. ವಿಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಹಕಾರಿ ತತ್ವದಡಿ ಗ್ರಾಹಕರಿಗೆ ಸೇವೆ ನೀಡುತ್ತಾ ಗಳಿಸಿದ ಲಾಭಾಂಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ಸಾಕಾರ ಮಾಡಲು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದ್ದೇವೆ
ಯಶ್‌ಪಾಲ್ ಸುವರ್ಣ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.