ADVERTISEMENT

ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 15:32 IST
Last Updated 13 ಜನವರಿ 2020, 15:32 IST
ಎಸ್ ಸುರೇಶ್ ಕುಮಾರ್
ಎಸ್ ಸುರೇಶ್ ಕುಮಾರ್   

ಉಡುಪಿ: ಮಾತೃಭಾಷೆಯಲ್ಲಿ ಶಿಕ್ಷಣ ಸಿಗಬೇಕು ಎಂದು ಒಂದು ವರ್ಗ ಒತ್ತಾಯಿಸಿದರೆ, ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಸಿಗಬೇಕು ಎಂದು ಮತ್ತೊಂದು ವರ್ಗ ಒತ್ತಾಯಿಸುತ್ತಿದೆ. ಈವಿಚಾರದಲ್ಲಿ ಗೊಂದಲಗಳಿದ್ದು, ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಹೇಳಿದರು.

ನಗರದಲ್ಲಿ ಸೋಮವಾರ ಬಿಜೆಪಿ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಸಾಮಾನ್ಯರ ಮಕ್ಕಳೂ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯಬೇಕು ಎಂದು ಸರ್ಕಾರ ಒಂದು ಸಾವಿರ ಶಾಲೆಗಳಲ್ಲಿ ಇಂಗ್ಲೀಷ್‌ ಮಾಧ್ಯಮ ಆರಂಭಿಸಿದೆ. ಇದಕ್ಕೆ ಕನ್ನಡಪರ ಚಿಂತಕರು ವಿರೋಧ ವ್ಯಕ್ತಪಡಿಸಿ, ಇಂಗ್ಲೀಷ್ ಮಾಧ್ಯಮ ರದ್ದು ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ದ್ವಂದ್ವದಲ್ಲಿ ಸಿಲುಕಿದೆ ಎಂದು ಸಚಿವರು ಹೇಳಿದರು.

ಸರ್ಕಾರ 1 ಸಾವಿರ ಹೆಚ್ಚುವರಿ ಇಂಗ್ಲೀಷ್ ಶಾಲೆಗಳನ್ನು ಆರಂಭಿಸುವ ಉದ್ದೇಶ ಹೊಂದಿತ್ತು. ಆದರೆ, ಯೋಜನೆ ಅನುಷ್ಠಾನಕ್ಕೆ ಅಡ್ಡಿಗಳು ಸಾಕಷ್ಟಿವೆ. ಮಾತೃ ಭಾಷೆಯಲ್ಲಿಯೇ ಶಿಕ್ಷಣ ಸಿಗಬೇಕು ಎಂದುರಾಷ್ಟ್ರೀಯ ಶಿಕ್ಷಣ ನೀತಿ ಹೇಳುತ್ತದೆ. ಇದರನ್ವಯ ಈಗಾಗಲೇ ಆರಂಭಿಸಿರುವ ಇಂಗ್ಲೀಷ್ ಮಾಧ್ಯಮವನ್ನು ಮುಚ್ಚಬೇಕಾಗುತ್ತದೆ ಎಂದು ವಿವರಿಸಿದರು.

ADVERTISEMENT

ಮತ್ತೊಂದೆಡೆ, ಯಾವ ಮಾಧ್ಯಮದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂಬ ಹಕ್ಕು ಇರುವುದು ಪೋಷಕರಿಗೆ ಮಾತ್ರ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಎಲ್ಲ ವಿಚಾರಗಳ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇಂಗ್ಲಿಷ್‌ ಮಾಧ್ಯಮದಲ್ಲಿ ಶಿಕ್ಷಣ ಸಿಗುತ್ತಿಲ್ಲ ಎಂಬ ಒಂದೇ ಕಾರಣಕ್ಕೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಶಾಲೆಯ ಎಸ್‌ಡಿಎಂಸಿ, ಗ್ರಾಮಸ್ಥರು, ಜನಪ್ರತಿನಿಧಿಗಳು ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿದರೆ ಮಕ್ಕಳ ಸಂಖ್ಯೆ ಹೆಚ್ಚಿಸಬಹುದು ಎಂದುಸ ಲಹೆ ನೀಡಿದರು.

ರಾಜ್ಯದಲ್ಲಿ ಏಕರೂಪ ಶಿಕ್ಷಣ ಪದ್ದತಿ ಜಾರಿಯಾಗಬೇಕು ಎಂಬ ಒತ್ತಾಯಗಳೂ ಇವೆ. ಇದರ ಬಗ್ಗೆಯೂ ವಿಚಾರ ಬೇಧಗಳಿವೆ ಎಂದು ಅಭಿಪ್ರಾಯಪಟ್ಟರು.

ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಅಧ್ಯಕ್ಷ ದಿನಕರ ಬಾಬು, ಮುಖಂಡರಾದ ಪ್ರಭಾಕರ ಪೂಜಾರಿ, ಕುಯಿಲಾಡಿ ಸುರೇಶ್‌ ನಾಯಕ್‌, ಕುತ್ಯಾರು ನವೀನ್‌ ಶೆಟ್ಟಿ, ಸಂಧ್ಯಾ ರಮೇಶ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.