ADVERTISEMENT

ಅನಧಿಕೃತ ಕಲ್ಲುಕ್ವಾರಿ ವಿರುದ್ಧ ಕ್ರಮ ಕೈಗೊಳ್ಳಿ

ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ದಿನಕರ ಬಾಬು ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2018, 13:52 IST
Last Updated 15 ಡಿಸೆಂಬರ್ 2018, 13:52 IST

ಉಡುಪಿ: ಜಿಲ್ಲೆಯಲ್ಲಿರುವ ಅನಧಿಕೃತ ಕಲ್ಲುಕ್ವಾರಿಗಳನ್ನು ಗುರುತಿಸಿ ಕೂಡಲೇ ಕಾರ್ಯಾಚರಣೆಯನ್ನು ನಿಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಕ್ರಮ ಕಲ್ಲುಕ್ವಾರಿ ಕುರಿತು ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಕುಂದಾಪುರ ತಾಲ್ಲೂಕಿನಲ್ಲಿ ಹಲವು ಕಲ್ಲುಕ್ವಾರಿಗಳು ಅನಧಿಕೃತವಾಗಿ ಕಾರ್ಯಾಚರಿಸುತ್ತಿದೆ. ಇದರಿಂದ ಸರ್ಕಾರಕ್ಕೆ ಬರಬೇಕಾದ ಕೋಟ್ಯಂತರ ರೂಪಾಯಿ ರಾಜಧನ ಸೋರಿಕೆಯಾಗುತ್ತಿದೆ.

ಕೆಲವು ಕ್ವಾರಿಗಳು ಅರಣ್ಯ ಭೂಮಿಯಲ್ಲಿವೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸದೆ ಕಲ್ಲುಕ್ವಾರಿಗಳಲ್ಲಿ ಕಲ್ಲನ್ನು ತೆಗೆಯಲಾಗುತ್ತಿದೆ. ಕೂಡಲೇ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕ್ವಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಗಂಗಾ ಕಲ್ಯಾಣ ಯೋಜನೆಯಲ್ಲಿ ಬೋರ್‍ವೆಲ್ ಕೊರೆದರೂ ಅವುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬವಾಗುತ್ತಿದೆ. ಪರಿಣಾಮ ಫಲಾನುಭವಿಗಳಿಗೆ ತೊಂದರೆಯಾಗುತ್ತಿದೆ ಎಂದು ಸದಸ್ಯರು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ಸಂಬಂಧಪಟ್ಟ ನಿಗಮಗಳು ಹಾಗೂ ಮೆಸ್ಕಾಂ ಇಲಾಖೆ ಜಂಟಿಯಾಗಿ ಪರಿಶೀಲಿಸಿ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆಯಿಂದ ನಿರ್ಮಿಸಲಾಗುವ ಕಿಂಡಿ ಅಣೆಕಟ್ಟುಗಳನ್ನು ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ. ನೀರು ಪೋಲಾಗದಂತೆ ನಿರ್ವಹಣೆ ಮಾಡಲು ಕಿಂಡಿ ಅಣೆಕಟ್ಟು ವ್ಯಾಪ್ತಿಯಲ್ಲಿ ಬಳಕೆದಾರರ ಸಮಿತಿ ರಚಿಸಿ ಹೊಣೆಯನ್ನು ನೀಡಬೇಕು ಎಂದು ಅಧ್ಯಕ್ಷರು ಹೇಳಿದರು.‌

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ದೀರ್ಘಾವಧಿ ರಜೆ ಮೇಲೆ ತೆರಳಿದ ಸಂದರ್ಭ ಆ ಶಾಲೆಗಳಿಗೆ ಪ್ರಭಾರಿ ಶಿಕ್ಷಕರು ಹಾಜರಾಗುತ್ತಿಲ್ಲ. ಇದರಿಂದ ಪಾಠ– ಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಶಿಕ್ಷಣ ಇಲಾಖೆ ಈ ಬಗ್ಗೆ ಗಮನ ಹರಿಸಬೇಕು ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಕೋಟ್ಯಾನ್ ಒತ್ತಾಯಿಸಿದರು.

ಜಿಲ್ಲೆಯಲ್ಲಿರುವ ಅತಿಥಿ ಶಿಕ್ಷಕರಿಗೆ ಬಾಕಿ ವೇತನವನ್ನು ಪಾವತಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಗೆ ತಿಳಿಸಿದರು. ಪಶ್ಚಿಮ ವಾಹಿನಿ ಯೋಜನೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 14 ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಮತ್ತು ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್‍ಗಳಲ್ಲಿ ನಿಯಮಿತವಾಗಿ ವಿದ್ಯಾರ್ಥಿಗಳ ಸಭೆ ನಡೆಸಿ ಕುಂದುಕೊರತೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಗ್ರಾಮ ಪಂಚಾಯತ್ ಸದಸ್ಯರ ಗೌರವಧನವನ್ನು ನೇರವಾಗಿ ಸದಸ್ಯರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಖಜಾನೆ-2ರ ವ್ಯವಸ್ಥೆಯಡಿ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಾಗೇಶ್ ರಾಯ್ಕರ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್ ಪಡುಬಿದ್ರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.