
ಉಡುಪಿ: ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರ್ಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್. ಬಿ.ವಿಜಯ ಬಲ್ಲಾಳ್ ಹೇಳಿದರು.
ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಲಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶೋಷಿತ ವರ್ಗಗಳಲ್ಲಿ ವೈದ್ಯರು, ಎಂಜಿನಿಯರ್ ಸೇರಿದಂತೆ ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಈ ಮೂಲಕ ಅಂಬೇಡ್ಕರ್ ಅವರ ಕನಸು ನನಸಾಗುತ್ತಿದೆ ಎಂದರು.
ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ತರಬೇತಿ ನಮ್ಮ ವ್ಯಕ್ತಿತ್ವವನ್ನು ಬೆಳೆಸುತ್ತದೆ. ಜಾನಪದ ಕಲೆ ಅಂದರೆ ಬರೀ ಕುಣಿಯುವುದಲ್ಲ, ಅದು ನಮ್ಮ ವ್ಯಕ್ತಿತ್ವವನ್ನು ಬದಲಾಯಿಸಬಲ್ಲದು ಎಂದು ಹೇಳಿದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ಕಲಾಗುರುಗಳಾದ ರಮೇಶ್ ಕಲ್ಮಾಡಿ ಹಾಗೂ ಗಣೇಶ್ ಬಾರ್ಕೂರು ಅವರನ್ನು ಗೌರವಿಸಲಾಯಿತು. ತರಬೇತಿಯಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮಿ ದಿನ್ನಿ, ಕೊರಗ ಸಮಾಜದ ಮುಖಂಡ ಗಣೇಶ್ ಕೊರಗ ಉಪಸ್ಥಿತರಿದ್ದರು.
ಉಪನ್ಯಾಸಕ ರಾಮಾಂಜಿ ನಿರೂಪಿಸಿದರು. ಬನ್ನಂಜೆ ವಸತಿಶಾಲೆಯ ಮೇಲ್ವಿಚಾರಕಿ ಸುಚಿತ್ರಾ ವಂದಿಸಿದರು. ಕಾರ್ಯಕ್ರಮದಲ್ಲಿ ಕಲಾ ತರಬೇತಿ ಪಡೆದ ವಿದ್ಯಾರ್ಥಿನಿಯರಿಂದ ಹಾಲಕ್ಕಿ ಕುಣಿತ, ಕೋಲಾಟ, ಕೊರಗ ಸಮುದಾಯದ ಡೊಳ್ಳು ಕುಣಿತ, ಕಂಗೀಲು ನೃತ್ಯ ಪ್ರದರ್ಶನಗೊಂಡವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.