ADVERTISEMENT

ಹೆಮ್ಮಾಡಿ ಸರ್ಕಾರಿ ಪ್ರಾಥಮಿಕ ಶಾಲೆ | ಹೆಚ್ಚುವರಿ ಶಿಕ್ಷಕರ ವರ್ಗಾವಣೆ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 2:49 IST
Last Updated 16 ಸೆಪ್ಟೆಂಬರ್ 2025, 2:49 IST
ಕುಂದಾಪುರ ಸಮೀಪದ ಹೆಮ್ಮಾಡಿಯಲ್ಲಿ ಸೋಮವಾರ ನಡೆದ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.
ಕುಂದಾಪುರ ಸಮೀಪದ ಹೆಮ್ಮಾಡಿಯಲ್ಲಿ ಸೋಮವಾರ ನಡೆದ ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.   

ಕುಂದಾಪುರ: ಹೆಚ್ಚುವರಿ ಶಿಕ್ಷಕರು ಎಂಬ ನೆಪದಲ್ಲಿ ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಇಬ್ಬರು ಶಿಕ್ಷಕರನ್ನು ಹಠಾತ್ ವರ್ಗಾವಣೆ ಮಾಡಿರುವ ಇಲಾಖೆ ನಿರ್ಧಾರದಿಂದ ವಿದ್ಯಾರ್ಥಿಗಳ ಕಲಿಕೆ ಮೇಲೆ ಪರಿಣಾಮಗಳಾಗುತ್ತಿದ್ದು, ವರ್ಗಾವಣೆ ಆದೇಶ ರದ್ದುಪಡಿಸುವಂತೆ ಆಗ್ರಹಿಸಿ ಸೋಮವಾರ ಹೆಮ್ಮಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಶಾಲಾಭಿವೃದ್ದಿ ಸಮಿತಿ, ಪೋಷಕರು, ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ರಾಘವೇಂದ್ರ ಕುಲಾಲ್ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಹಿರಿಯ ವಿದ್ಯಾರ್ಥಿಗಳು, ಶಾಲಾಭಿವೃದ್ದಿ ಸಮಿತಿ ಶ್ರಮ ವಹಿಸುತ್ತಿದೆ. ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದು, ಶಿಕ್ಷಣ ಇಲಾಖೆಯ ಅವೈಜ್ಞಾನಿಕ ನೀತಿಗಳಿಂದಾಗಿ ವಿದ್ಯಾರ್ಥಿಗಳ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮಕ್ಕಳ ಭವಿಷ್ಯದೊಂದಿಗೆ ಇಲಾಖೆ ಚೆಲ್ಲಾಟವಾಡಬಾರದು. 1ರಿಂದ 7ನೇ ತರಗತಿವರೆಗಿನ 68 ವಿದ್ಯಾರ್ಥಿಗಳಿಗೆ ಮೂರೇ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ದೊರೆಯು ಸಾಧ್ಯವಿಲ್ಲ. ಆದ್ದರಿಂದ ವರ್ಗಾವಣೆಗೊಂಡಿರುವ ಇಬ್ಬರು ಶಿಕ್ಷಕಿಯರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಸ್ಥಳಕ್ಕೆ ಬಂದ ಮುಖಂಡ ಕೆ. ಗೋಪಾಲ ಪೂಜಾರಿ ಅವರು, ಪೋಷಕರು, ಹಿರಿಯ ವಿದ್ಯಾರ್ಥಿಗಳ ಮನವಿ ಆಲಿಸಿದರು. ಸ್ಥಳದಲ್ಲೇ ಬೈಂದೂರು ಬಿಇಒಗೆ ಕರೆ ಮಾಡಿ ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ಇಲ್ಲಿನ 56 ವಿದ್ಯಾರ್ಥಿಗಳನ್ನು ಟಿಸಿ ಕೊಟ್ಟು ಕಳುಹಿಸಲಾಗಿದ್ದರೂ, ಈ ಬಗ್ಗೆ ನಿಮ್ಮ ಇಲಾಖೆ ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿ, ಸರ್ಕಾರಿ ಶಾಲೆಯನ್ನು ಮುಚ್ಚಿಸಲು ಹೊರಟಿದ್ದೀರಾ ಎಂದು ಕಿಡಿಕಾರಿದರು.

ADVERTISEMENT

ಬಿಇಒಗೆ ತರಾಟೆ: ಬೆಳಿಗ್ಗೆಯೇ ಮಕ್ಕಳೊಂದಿಗೆ ಶಾಲೆಗೆ ಬಂದ ಪೋಷಕರು, ಹಿರಿಯ ವಿದ್ಯಾರ್ಥಿಗಳು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಸ್ಥಳಕ್ಕೆ ಬಂದ ಶಿಕ್ಷಣ ಸಂಯೋಜಕ ಯೋಗೀಶ್, ಪ್ರತಿಭಟನಾ ನಿರತರ ಮನವೊಲಿಸಲು ಪ್ರಯತ್ನಿಸಿದರು. ಸ್ಥಳಕ್ಕೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಅವರೊಂದಿಗೆ ಏರಿದ ಧ್ವನಿಯಲ್ಲಿ ಮಾತನಾಡಿ ಅಸಮಾಧಾನ ವ್ಯಕ್ತಪಡಿಸಿದರು.

ಅಹವಾಲಿಗೆ ಸ್ಪಂದಿಸಿದ ಬಿಇಒ ಅವರು, ಶಾಲೆಯ ಪ್ರಸ್ತುತ ಶೈಕ್ಷಣಿಕ ಸ್ಥಿತಿಗತಿ ಕುರಿತು ಸೋಮವಾರ ಸಂಜೆಯೊಳಗೆ ಮಾಜಿ ಶಾಸಕರ ಗಮನಕ್ಕೆ ತರುತ್ತೇನೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಆದೇಶದ ರದ್ದತಿ ಸರ್ಕಾರದ ಮಟ್ಟದಲ್ಲಿ ಆಗಬೇಕಾಗಿರುವುದರಿಂದ, ಮಾಜಿ ಶಾಸಕರು ಈ ಬಗ್ಗೆ ಪ್ರಯತ್ನ ಮಾಡುವ ಬಗ್ಗೆ ತಿಳಿಸಿದ್ದಾರೆ ಎಂದು ಭರವಸೆ ನೀಡಿದ ಬಳಿಕ ಮಧ್ಯಾಹ್ನದ ಮೇಲೆ ಪ್ರತಿಭಟನೆ ಹಿಂಪಡೆಯಲಾಯಿತು.

ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಭಾರತಿ ಆಚಾರ್, ಉಪಾಧ್ಯಕ್ಷ ರಾಘವೇಂದ್ರ ಬಿ. ಮೊಗವೀರ, ಹೆಮ್ಮಾಡಿ ಗ್ರಾ.ಪಂ. ಸದಸ್ಯ ರಾಘವೇಂದ್ರ ಪೂಜಾರಿ ಹೆದ್ದಾರಿ ಮನೆ, ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಅಶೋಕ್ ಕುಮಾರ್ ಭಟ್, ಕಾರ್ಯದರ್ಶಿ ಶ್ರೀಕಾಂತ ಹೆಮ್ಮಾಡಿ, ಹಿರಿಯ ವಿದ್ಯಾರ್ಥಿಗಳಾದ ನಾಗರಾಜ್ ಪುತ್ರನ್, ಕಿರಣ್ ದೇವಾಡಿಗ ಹೊಸ್ಕಳಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.