ADVERTISEMENT

ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಹೀಗಿವೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 8:05 IST
Last Updated 19 ಡಿಸೆಂಬರ್ 2025, 8:05 IST
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು   

ಉಡುಪಿ‌: ಕಾಂಕ್ರೀಟ್ ಮಿಕ್ಸಿಂಗ್ ವಾಹನಗಳು ಓವರ್ ಲೋಡ್‌ನಿಂದಾಗಿ ರಸ್ತೆಯ ಮೇಲೆ  ಕಾಂಕ್ರೀಟ್  ಬೀಳಿಸುತ್ತಿರುವುದರಿಂದ ಸಾರ್ವಜನಿಕರ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಅಂತಹ ವಾಹನಗಳ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು, ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯವಿರುವ ಸಿದ್ಧ ಕಾಂಕ್ರೀಟ್ ಮಿಶ್ರಣವನ್ನು ಸಾಗಿಸುವ ಕಾಂಕ್ರೀಟ್ ಮಿಕ್ಸಿಂಗ್ ವಾಹನಗಳಿಂದ ಕಾಂಕ್ರೀಟ್ ಮಿಶ್ರಣವು ರಸ್ತೆಯ ಮೇಲೆ ಎಲ್ಲೆಂದರಲ್ಲಿ ಬಿದ್ದು, ಉಬ್ಬುಗಳು ಉಂಟಾಗಿ ದ್ವಿಚಕ್ರ ವಾಹನಗಳು ಸೇರಿದಂತೆ ಮತ್ತಿತರ ವಿವಿಧ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುವುದರ ಜೊತೆಗೆ ಅಪಘಾತಗಳು ಸಂಭವಿಸುತ್ತಿವೆ ಎಂದರು.

ಈಗಾಗಲೇ ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ 18 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದ್ದು, ಈ ಸ್ಥಳಗಳನ್ನು ಪರಿಶೀಲಿಸಿ ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಅವುಗಳಲ್ಲಿ ಬಹುತೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.

ADVERTISEMENT

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಜಾಗಗಳನ್ನು ಗುರುತಿಸಿ, ಸಾರ್ವಜನಿಕ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಬೇಕು. ರಸ್ತೆ ಬದಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ತೆರವುಗೊಳಿಸಬೇಕು. ಸಾಧ್ಯವಾದಲ್ಲಿ ವೆಂಡಿಂಗ್ ಝೋನ್‌ಗೆ ಸ್ಥಳ ಗುರುತಿಸಿ, ಅಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಪೌರಾಯುಕ್ತರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಕಿರಣ್ ಎಸ್., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ ಉಪಸ್ಥಿತರಿದ್ದರು.

‘ಎಲ್ಲೆಂದರಲ್ಲಿ ಬಸ್‌ ನಿಲ್ಲಿಸಿದರೆ ಕ್ರಮ ಕೈಗೊಳ್ಳಿ’

ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ ಎಲ್ಲೆಂದರಲ್ಲಿ ನಿಲುಗಡೆಯಾಗುತ್ತಿವೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಹಿಂದೆ ಈ ಬಗ್ಗೆ ಆರ್.ಟಿ.ಒ. ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಈ ನಿಯಮವನ್ನು ಉಲ್ಲಂಘಿಸುವ ಬಸ್‌ನವರ ಮೇಲೆ ಪ್ರಕರಣ ದಾಖಲಿಸಬೇಕು. ಪ್ರತಿಯೊಂದು ಬಸ್‌ಗಳಿಗೂ ಸಹ ಬಾಗಿಲುಗಳನ್ನು ಅಳವಡಿಸಬೇಕು. ಅದಕ್ಕೆ ನಿಗದಿತ ಸಮಯಾವಕಾಶ ಕೊಟ್ಟು ಅಳವಡಿಸದೇ ಇರುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರ್.ಟಿ.ಒ. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.