ಉಡುಪಿ: ಜಿಲ್ಲೆಯ ಹೆಸ್ಕತ್ತೂರು ಹಾಗೂ ಕೊರ್ಗಿ ಗ್ರಾಮ ಪಂಚಾಯಿತಿಗಳನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಇದರಿಂದ ಆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಆಗಿರುವ ಪ್ರಯೋಜನವನ್ನು ಇತರೆ ಗ್ರಾಮದವರಿಗೆ ತಿಳಿಯಪಡಿಸಿ ಅವರೂ ಕೂಡ ತಂಬಾಕು ಉತ್ಪನ್ನಗಳಿಂದ ಅಂತರ ಕಾಯ್ದುಕೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋಟ್ಪಾ-2003 ಕಾಯಿದೆಯ ಕುರಿತ ದ್ವಿತೀಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತಂಬಾಕು ಮುಕ್ತ ಹಳ್ಳಿ ಯೋಜನೆಯಡಿಯಲ್ಲಿ 5 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದೆ. 155 ಗ್ರಾಮ ಪಂಚಾಯಿತಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಾಗಬೇಕು ಎಂದರು.
ಜಿಲ್ಲೆಯ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಿಗಾ ವಹಿಸಬೇಕು. ಕೋಟ್ಪಾ ಕಾಯಿದೆಯ ಉಲ್ಲಂಘನೆ ಕಂಡುಬಂದಲ್ಲಿ ಕೂಡಲೇ ಸಮಿತಿಗೆ ಮಾಹಿತಿ ನೀಡಬೇಕು. ನಿಯಮ ಮೀರಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡಲು ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ 2025 ರ ಏಪ್ರಿಲ್ ತಿಂಗಳಿನಿಂದ ಈವರೆಗೆ 23 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, 324 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು ₹ 52,900 ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 60 ಪ್ರಕರಣಗಳಿಂದ ₹6750 ದಂಡ ವಸೂಲಿ ಮಾಡಲಾಗಿದೆ ಎಂದರು.
ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.